ADVERTISEMENT

ಬೆಳಗಾವಿ | ಬಸ್‌ ನಿರ್ವಾಹಕನ ವಿರುದ್ಧ ಪೋಕ್ಸೊ ಪ್ರಕರಣ: ಕರವೇಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2025, 6:44 IST
Last Updated 22 ಫೆಬ್ರುವರಿ 2025, 6:44 IST
   

ಬೆಳಗಾವಿ: 'ಮರಾಠಿ ಮಾತನಾಡಲು ಬರಲ್ಲ’ ಎಂದು ಹೇಳಿದ್ದಕ್ಕೆ ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ಹಲ್ಲೆಗೆ ಒಳಗಾಗಿದ್ದ ಬಸ್‌ ನಿರ್ವಾಹಕ ಮಹಾದೇವ ಹುಕ್ಕೇರಿ ವಿರುದ್ಧ ಯುವತಿ ಮಾರಿಹಾಳ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ, ಇಲ್ಲಿನ ಕೋಟೆ ಬಳಿಯ ಅಶೋಕ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, 'ರಾಜಕೀಯ ಒತ್ತಡದ ಕಾರಣಕ್ಕೆ ನಿರ್ವಾಹಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದರ ಮೂಲಕ ಪ್ರಕರಣದ ದಿಕ್ಕು ತಪ್ಪಿಸುವ ಕೆಲಸವಾಗುತ್ತಿದೆ. ತಕ್ಷಣವೇ ಈ ಪ್ರಕರಣ ಹಿಂದಕ್ಕೆ ಪಡೆಯಬೇಕು' ಎಂದು ಆಗ್ರಹಿಸಿದರು.

'ರಾಜಕೀಯ ಒತ್ತಡದ ಹಿನ್ನೆಲೆಯಲ್ಲಿ ನಿರ್ವಾಹಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರ ವಿರುದ್ಧವೂ ಕ್ರಮವಾಗಬೇಕು' ಎಂದೂ ಒತ್ತಾಯಿಸಿದರು.

ADVERTISEMENT

'ನಿರ್ವಾಹಕನ ಮೇಲೆ ಹಲ್ಲೆಯ ಘಟನೆ ನಡೆದು ಒಂದು ದಿನವಾದರೂ ಜಿಲ್ಲೆಯ ಜನಪ್ರತಿನಿಧಿಗಳು ಧ್ವನಿ ಎತ್ತದಿರುವುದು ಖಂಡನೀಯ' ಎಂದು ಆಕ್ರೋಶ ವ್ಯಕ್ತಪಡಿಸಿದರು.

'ಇಲ್ಲಿಂದ ಮಾರಿಹಾಳಕ್ಕೆ ತೆರಳಿ, ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತೇವೆ' ಎಂದು ಎಚ್ಚರಿಕೆ ಕೊಟ್ಟರು.

'ಹಲ್ಲೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಗಡಿಯಲ್ಲಿ ನಾಡವಿರೋಧಿ ಕೆಲಸ ಮಾಡುವವರ ವಿರುದ್ಧ ಶಿಸ್ತು ಕ್ರಮವಾಗಬೇಕು' ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.