ಬೆಳಗಾವಿ: ‘ಮಹಿಳಾ ನೌಕರರ ಮೇಲೆ ಲೈಂಗಿಕ ದೌರ್ಜನ್ಯ, ಅನ್ಯಾಯ ನಡೆದರೆ, ನೇರವಾಗಿ ನನ್ನನ್ನು ಸಂಪರ್ಕಿಸಿ. ನಿಮ್ಮ ಬೆನ್ನಿಗೆ ನಿಲ್ಲುತ್ತೇನೆ. ಮಹಿಳೆಯರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಎಚ್ಚರಿಕೆ ನೀಡಿದರು.
ಇಲ್ಲಿನ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಸಾಮಾಜಿಕ ಪಿಡುಗು ಆಗಿರುವ ಬಾಲ್ಯವಿವಾಹ ಪದ್ಧತಿ ವಿರುದ್ಧ ಎಲ್ಲರೂ ಧ್ವನಿ ಎತ್ತಬೇಕು. ತಮ್ಮ ವ್ಯಾಪ್ತಿಯಲ್ಲಿ ಬಾಲ್ಯವಿವಾಹ ನಡೆದಿರುವುದು ಕಂಡುಬಂದರೆ, ಅಂಗನವಾಡಿ ಕಾರ್ಯಕರ್ತೆಯರು ನಿರ್ಭೀತಿಯಿಂದ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ಕೊಡಬೇಕು. ಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕ್ರಮ ವಹಿಸಿದ್ದು, ಬಾಲ್ಯವಿವಾಹ ಇಲ್ಲದ ಗ್ರಾಮ ಪಂಚಾಯಿತಿಗೆ ₹25 ಸಾವಿರ ಬಹುಮಾನ ನೀಡುವುದಾಗಿ ಘೋಷಿಸಿದೆ’ ಎಂದು ಹೇಳಿದರು.
‘ಪ್ರತಿ ಗರ್ಭಿಣಿಗೆ ಆರೋಗ್ಯವಂತ ಮಗು ಜನಿಸಲಿ ಎಂಬುದು ನಮ್ಮ ಆಶಯ. ಬೆಳಗಾವಿ ಮಾತ್ರವಲ್ಲ; ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಒಂದು ತಿಂಗಳು ನಡೆಸಲಿದ್ದೇವೆ’ ಎಂದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ‘ಇಲಾಖೆ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಂಗನವಾಡಿ ಶಿಕ್ಷಕಿಯರು ಮತ್ತು ಕಾರ್ಯಕರ್ತೆಯರು ಸಕ್ರಿಯವಾಗಿ ಕೆಲಸ ಮಾಡಬೇಕು’ ಎಂದು ಹೇಳಿದರು.
ಪ್ರೊಬೇಷನರಿ ಐಎಎಸ್ ಅಧಿಕಾರಿ ಅಭಿನವ ಜೈನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್.ಚೇತನಕುಮಾರ, ನಿರೂಪಣಾಧಿಕಾರಿ ಅನಿಲಕುಮಾರ ಹೆಗಡೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪರ್ವೀನ್ ಶೇಖ್, ಬೆಳಗಾವಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರ್.ರಾಮಮೂರ್ತಿ, ಬೆಳಗಾವಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಮಿತ್ರಾ, ಶಂಕರಗೌಡ ಪಾಟೀಲ, ಯುವರಾಜ ಕದಂ ಇದ್ದರು.
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಅಂಗವಿಕಲ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ಬ್ಯಾಟರಿಚಾಲಿತ ಗಾಲಿಕುರ್ಚಿ, ಬ್ರೈಲ್‌ಕಿಟ್, ಟಾಕಿಂಗ್ ಲ್ಯಾಪ್‌ಟಾಪ್ ಹಾಗೂ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು. ಅಂಗನವಾಡಿ ಕೇಂದ್ರಗಳು ಆರಂಭವಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ 50 ಗರ್ಭಿಣಿಯರಿಗೆ ಸೀಮಂತ ನೆರವೇರಿಸಲಾಯಿತು.
ಇದಕ್ಕೂ ಮುನ್ನ, ಮಕ್ಕಳಿಗೆ ಅನ್ನಪ್ರಾಶನ, ಅಕ್ಷರಭ್ಯಾಸ, ಮಕ್ಕಳ ಫ್ಯಾಷನ್ ಷೋ ಮತ್ತಿತರ ಕಾರ್ಯಕ್ರಮ ಜರುಗಿದವು.
ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರ ನೇಮಕಾತಿಯಲ್ಲಿ ವಿಧವೆಯರಿಗೆ ಶೇ 5ರಷ್ಟು ಮೀಸಲಾತಿ ಇತ್ತು. ಈಗ ಯಾವ ನಿರ್ಬಂಧವಿಲ್ಲದೆ ವಿಧವೆಯರ ನೇಮಕಾತಿಗೆ ಅವಕಾಶ ಕಲ್ಪಿಸಲಾಗಿದೆಲಕ್ಷ್ಮೀ ಹೆಬ್ಬಾಳಕರ ಸಚಿವೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಅಂಗನವಾಡಿ ಕೇಂದ್ರಗಳ ಮಕ್ಕಳು ಖಾಸಗಿ ನರ್ಸರಿಗಳಿಗೆ ಹೋಗಬಾರದೆಂದು ಎಲ್‌ಕೆಜಿ ಯುಕೆಜಿ ತರಗತಿಗಳನ್ನು ಆರಂಭಿಸಲಾಗಿದೆ. ಇದರಲ್ಲಿ ಲಕ್ಷ್ಮೀ ಹೆಬ್ಬಾಳಕರ ಪ್ರಯತ್ನ ದೊಡ್ಡದುಚನ್ನರಾಜ ಹಟ್ಟಿಹೊಳಿ ವಿಧಾನ ಪರಿಷತ್ ಸದಸ್ಯ
‘ಬಡ್ತಿ; ಹಣಕಾಸು ಇಲಾಖೆಗೆ ಪ್ರಸ್ತಾವ’
‘ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕರಿಗೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಎಸಿಡಿಪಿಒ) ಹುದ್ದೆಗೆ ಬಡ್ತಿ ನೀಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುತ್ತಿದ್ದೇವೆ. ಇದರೊಂದಿಗೆ ಪದವವೀಧರ ಹಾಗೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ವಿವಿಧ ಹಂತದ 400 ಸಿಬ್ಬಂದಿಗೆ ಒಂದು ಬಾರಿ ಬಡ್ತಿ ನಿಯಮದಡಿ ಮೇಲ್ವಿಚಾರಕರ ಹುದ್ದೆಗೆ ಬಡ್ತಿ ನೀಡಲು ಹಣಕಾಸು ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದೇವೆ’ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.