ADVERTISEMENT

ಬೇಸಿಗೆಯಲ್ಲಿ ಸಮರ್ಥವಾಗಿ ನೀರು ಪೂರೈಸಿ: ಅಧಿಕಾರಿಗಳಿಗೆ ಪ್ರಕಾಶ ಹುಕ್ಕೇರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 7:04 IST
Last Updated 17 ಫೆಬ್ರುವರಿ 2026, 7:04 IST
ಚಿಕ್ಕೋಡಿ ಪಟ್ಟಣದ ಮಿನಿವಿಧಾನಸೌಧದಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯ ಕುರಿತು ಏರ್ಪಡಿಸಿದ ಸಭೆಯಲ್ಲಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ, ತಹಶೀಲ್ದಾರ್‌ ರಾಜೇಶ ಬುರ್ಲಿ ಇತರರು ಭಾಗವಹಿಸಿದ್ದರು
ಚಿಕ್ಕೋಡಿ ಪಟ್ಟಣದ ಮಿನಿವಿಧಾನಸೌಧದಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯ ಕುರಿತು ಏರ್ಪಡಿಸಿದ ಸಭೆಯಲ್ಲಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ, ತಹಶೀಲ್ದಾರ್‌ ರಾಜೇಶ ಬುರ್ಲಿ ಇತರರು ಭಾಗವಹಿಸಿದ್ದರು   

ಚಿಕ್ಕೋಡಿ: ಪಟ್ಟಣದ ಮಿನಿವಿಧಾನಸೌಧದ ತಾಲ್ಲೂಕು ಕಚೇರಿಯ ಸಭಾಭವನದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯ ಕುರಿತು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ–2 ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಸಂಬಂಧಿಸಿದ ಅಧಿಕಾರಿಗಳ ಸಭೆ ಸೋಮವಾರ ನಡೆಯಿತು.

ತಾಲ್ಲೂಕಿನ ಯಕ್ಸಂಬಾ, ಸದಲಗಾ, ಚಿಕ್ಕೋಡಿ ಪಟ್ಟಣ ಸೇರಿದಂತೆ ಪ್ರತಿಯೊಂದು ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘ಬೇಸಿಗೆ ಸಂದರ್ಭದಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಮುಖ್ಯವಾಗಿ ತಾಲ್ಲೂಕಿನ ಮಾಂಜರಿ ಗ್ರಾಮದ ಬಳಿ ಕೃಷ್ಣಾ ನದಿಯಿಂದ ಚಿಕ್ಕೋಡಿ ಪಟ್ಟಣಕ್ಕೆ ನೀರು ಪೂರೈಕೆ ಮಾಡುವ ಪೈಪಲೈನ್ ಕಾಮಗಾರಿಯನ್ನು ಮಾ. 31ರೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬವಾದರೆ ಸಹಿಸುವುದಿಲ್ಲ‘ ಎಂದು ಹೇಳಿದರು.

ADVERTISEMENT

ಕುಡಿಯುವ ನೀರು ಪೂರೈಕೆಗೆ ಅಗತ್ಯವಾದ ವಿದ್ಯುತ್ ಪೂರೈಕೆಯಲ್ಲಿ ತಾಂತ್ರಿಕ ವ್ಯತ್ಯಯ ಉಂಟಾಗದಂತೆ ಹೆಸ್ಕಾಂ ಅಧಿಕಾರಿಗಳು ನೋಡಿಕೊಳ್ಳಬೇಕು. ಜನರಿಗೆ ಯಾವುದೇ ತೊಂದರೆ ಆಗದಂತೆ ಟ್ಯಾಂಕರ್ ವ್ಯವಸ್ಥೆ ಸೇರಿದಂತೆ ಇನ್ನಿತರೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ, ತಹಶೀಲ್ದಾರ್‌ ರಾಜೇಶ ಬುರ್ಲಿ, ಚಿಕ್ಕೋಡಿ ಪುರಸಭೆ ಮುಖ್ಯಾಧಿಕಾರಿ ಜಗದೀಶ ಈಟಿ, ಯಕ್ಸಂಬಾ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹಾಂತೇಶ ನಿಡವಣಿ, ಎಸ್ ಆರ್ ರೂಗಿ, ಹೆಸ್ಕಾಂ ಅಧಿಕಾರಿ ಸುಖಸಾರೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.