ADVERTISEMENT

ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವಕ್ಕೆ ಪ್ರಧಾನಿ ಚಾಲನೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 15:37 IST
Last Updated 4 ಮಾರ್ಚ್ 2021, 15:37 IST

ಬೆಳಗಾವಿ: ‘ದೇಶದ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಮಹತ್ವ ಸಾರುವ ‘ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ’ ವರ್ಷಾಚರಣೆ ಅಂಗವಾಗಿ ಕಿತ್ತೂರಿನಲ್ಲಿ ಮಾರ್ಚ್‌ 12ರಂದು ಆಯೋಜಿಸಲಾಗುವ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆ ಮೂಲಕ ಚಾಲನೆ ನೀಡಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಇಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಕಾರ್ಯಕ್ರಮವು ದೇಶದ 75 ಸ್ಥಳಗಳಲ್ಲಿ ನಡೆಯಲಿದೆ. ಈ ಪೈಕಿ ರಾಜ್ಯದ ಎರಡು ಸ್ಥಳಗಳಲ್ಲಿ ಬೆಳಗಾವಿಯು ಒಂದಾಗಿದೆ’ ಎಂದರು.

‘ಸ್ವಾತಂತ್ರ್ಯ ಸಂಗ್ರಾಮದಲ್ಲಿ ರಾಣಿ ಕಿತ್ತೂರು ಚನ್ನಮ್ಮನ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಕಿತ್ತೂರು ಕೋಟೆ ಆವರಣದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಿತ್ತೂರಿನಿಂದ ಬೈಸಿಕಲ್ ರ‍್ಯಾಲಿ ಆಯೋಜಿಸಲಾಗಿದೆ. ಅದು ನಂದಗಡ ತಲುಪಲಿದೆ. 75 ಜನ ಸೈಕ್ಲಿಸ್ಟ್‌ಗಳು ಭಾಗವಹಿಸಲಿದ್ದಾರೆ. ಮಾರ್ಗ ಮಧ್ಯದಲ್ಲಿ ಸಿಗುವ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಭೇಟಿ ನೀಡಲಿದ್ದಾರೆ’ ಎಂದು ಹೇಳಿದರು.

ADVERTISEMENT

‘ಮುಂದಿನ 75 ವಾರಗಳವರೆಗೆ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಹೋಬಳಿ ಕೇಂದ್ರಗಳಲ್ಲಿ ಸ್ವಾತಂತ್ರ್ಯ ಸಂಗ್ರಾಮ ಹಾಗೂ ಹೋರಾಟಗಾರರ ಕೊಡುಗೆ ಮೆಲುಕು ಹಾಕುವ ಮತ್ತು ಸ್ವಾತಂತ್ರ್ಯದ ಮಹತ್ವ ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.