ಒಳಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಸೋಮವಾರ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಂಡ ಮಾದಿಗ ಹಾಗೂ ಮಾದಿಗ ಒಳಪಂಗಡಗಳ ಜನ
ಪ್ರಜಾವಾಣಿ ಚಿತ್ರ
ಬೆಳಗಾವಿ: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಇಲ್ಲಿನ ಸುವರ್ಣ ಸೌಧ ಮುತ್ತಿಗೆ ಹಾಕಲು ಉದ್ದೇಶಿಸಿದ್ದ ಮಾದಿಗ ಹಾಗೂ ಉಪಜಾತಿ ಸಂಘಟನೆಗಳ ಒಕ್ಕೂಟದ ಸದಸ್ಯರು, ರಾಜ್ಯ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಹೋರಾಟ ಕೈಬಿಟ್ಟರು.
‘ಮೂರೇ ತಿಂಗಳಲ್ಲಿ ಒಳಮೀಸಲಾತಿ ಜಾರಿಗೆ ತರುತ್ತೇವೆ’ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಭರವಸೆ ನೀಡಿದ್ದರಿಂದ, ಸುವರ್ಣಸೌಧ ಮುತ್ತಿಗೆ ಹೋರಾಟ ಕೈಬಿಟ್ಟರು.
ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಹಾಗೂ ಉಪಜಾತಿ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು. ‘ಚಳಿಗಾಲದ ಅಧಿವೇಶನದಲ್ಲಿ ಒಳಮೀಸಲಾತಿ ಅನುಷ್ಠಾನ ಮಾಡಲೇಬೇಕು’ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.
ಸ್ಥಳಕ್ಕೆ ಬಂದ ಸಚಿವ ಮಹದೇವಪ್ಪ, ‘ಇದಕ್ಕೆ ಸರ್ಕಾರ ಬದ್ಧವಾಗಿದೆ. ಸುಪ್ರೀಂಕೋರ್ಟ್ ಕೂಡ ನಿರ್ದೇಶನ ನೀಡಿದೆ. ಅದರಂತೆ ಅಗತ್ಯ ದತ್ತಾಂಶಗಳನ್ನು ಸಂಗ್ರಹಿಸಿ ಅನುಷ್ಠಾನ ಮಾಡಬೇಕಾಗುತ್ತದೆ. ಇಲ್ಲದಿದ್ದರೆ ಯಾರಾದರೂ ನ್ಯಾಯಾಲಯಕ್ಕೆ ಹೋದರೆ ಮತ್ತೆ ಸಮಸ್ಯೆಯಾಗುತ್ತದೆ. ಅದಕ್ಕಾಗಿ ಮೂರು ತಿಂಗಳ ಕಾಲಾವಕಾಶ ಬೇಕು’ ಎಂದರು.
ಸಚಿವರಾದ ಆರ್.ಬಿ.ತಿಮ್ಮಾಪೂರ, ಸತೀಶ ಜಾರಕಿಹೊಳಿ, ಕೆ.ಎಚ್.ಮುನಿಯಪ್ಪ ಕೂಡ ಇದಕ್ಕೆ ಧ್ವನಿಗೂಡಿಸಿದರು.
ಇದಕ್ಕೂ ಮುನ್ನ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಗೋವಿಂದ ಕಾರಜೋಳ, ಸಿ.ಟಿ. ರವಿ ಮುಂತಾದವರು, ‘ಒಳಮೀಸಲಾತಿಯನ್ನು ಈ ಹಿಂದಿನ ಬಿಜೆಪಿ ಸರ್ಕಾರವೇ ಘೋಷಣೆ ಮಾಡಿದೆ. ಕಾಂಗ್ರೆಸ್ ಸರ್ಕಾರ ವಿರೋಧ ಮಾಡುವುದನ್ನು ಬಿಟ್ಟು ಇದೇ ಅಧಿವೇಶನದಲ್ಲಿ ಘೋಷಿಸಬೇಕು’ ಎಂದು ಆಗ್ರಹಿಸಿದರು.
‘ನಮ್ಮ ಸಮಾಜ ಮೂರು ದಶಕಗಳಿಂದ ಶಾಂತ ಹೋರಾಟ ಮಾಡಿಕೊಂಡು ಬಂದಿದೆ. ನಮ್ಮ ಹಕ್ಕು ನಮಗೆ ಕೊಡುವಲ್ಲಿ ಇದುವರೆಗಿನ ಎಲ್ಲ ಸರ್ಕಾರಗಳೂ ನಿರ್ಲಕ್ಷ್ಯ ಮಾಡಿವೆ. ಇನ್ನು ಮೂರು ತಿಂಗಳಲ್ಲಿ ನುಡಿದಂತೆ ನಡೆಯದಿದ್ದರೆ ಪರಿಣಾಮ ನೆಟ್ಟಗೆ ಇರುವುದಿಲ್ಲ’ ಎಂದು ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಎಚ್ಚರಿಸಿದರು.
ವಿವಿಧ ಮಠಾಧೀಶರು, ಶಾಸಕರು, ಮುಖಂಡರ ನೇತೃತ್ವದಲ್ಲಿ ಮಾದಿಗ, ಸಮಗಾರ, ಮಚಗಾರ, ಡೋಹರ ಡಕ್ಕಲಿಗ ಜಾತಿ ಉಪಜಾತಿಗಳ ಜನರೂ ಪಾಲ್ಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.