ADVERTISEMENT

ಅಮಿತ್ ಶಾ ವಿರುದ್ಧ ಪ್ರತಿಭಟನೆ: ರೈತ ಮುಖಂಡರನ್ನು ಬಂಧಿಸಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 17 ಜನವರಿ 2021, 6:14 IST
Last Updated 17 ಜನವರಿ 2021, 6:14 IST
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರನ್ನು ಪೊಲೀಸರು ಬಂಧಿಸಿದರುಪ್ರಜಾವಾಣಿ ಚಿತ್ರ
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರನ್ನು ಪೊಲೀಸರು ಬಂಧಿಸಿದರುಪ್ರಜಾವಾಣಿ ಚಿತ್ರ   

ಬೆಳಗಾವಿ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೇಶದಾದ್ಯಂತ ಚಳವಳಿ ನಡೆಸುತ್ತಿದ್ದರೂ ಸ್ಪಂದಿಸದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್ ಶಾ ಬಹಿರಂಗ ಚರ್ಚೆಗೆ ಬರಬೇಕೆಂದು ಆಗ್ರಹಿಸಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ಬಂಧಿಸಿದರು.

ಬೆಳ್ಳಂಬೆಳಿಗ್ಗೆಯೇ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಸೇರಿದ ರೈತ ಮುಖಂಡರು, ಕೇಂದ್ರದ ರೈತ ವಿರೋಧಿ ಧೋರಣೆ ವಿರುದ್ಧ ಧಿಕ್ಕಾರ ಕೂಗಿದರು. ಇಬ್ಬರು ರೈತರು ಅರೆಬೆತ್ತಲೆಯಾಗಿ ಉರುಳುಸೇವೆ ಮಾಡಿದರು. ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.

‘ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ಚಳವಳಿ ತೀವ್ರಗೊಂಡಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಬೇಡಿಕೆ ಈಡೇರಿಸಲು ಕ್ರಮ ವಹಿಸಿಲ್ಲ. ರೈತರ ಭವಿಷ್ಯದ ವಿಷಯದಲ್ಲೂ ಸರ್ಕಾರ ಹಟಮಾರಿ ಧೋರಣೆ ಅನುಸರಿಸುತ್ತಿರುವುದು ಖಂಡನೀಯ. ವಿವಾದಿತ ಕಾಯ್ದೆಗಳ ಬಗ್ಗೆ ರೈತರಿಗೆ ಹಲವು ಅನುಮಾನ ಮತ್ತು ಗೊಂದಲಗಳಿವೆ. ಅವುಗಳನ್ನು ಅಮಿತ್ ಶಾ ಇಲ್ಲಿಗೆ ಬಂದು, ನಮ್ಮೊಂದಿಗೆ ಸಂವಾದ ನಡೆಸಿ ಬಗೆಹರಿಸಬೇಕು’ ಎಂದು ಸಂಚಾಲಕ ಚೂನಪ್ಪ ಪೂಜಾರಿ ಒತ್ತಾಯಿಸಿದರು.

ADVERTISEMENT

‘ರೈತರಿಗೆ ಮನವರಿಕೆ ಮಾಡಿಕೊಡಲು ಆಗದಿದ್ದರೆ ಅವರು ಜನರ ಕ್ಷಮೆ ಯಾಚಿಸಬೇಕು. ಬಿಜೆಪಿ ಜನಸೇವಕ ಸಮಾವೇಶ ಸಮಾರೋಪದಲ್ಲಿ ಭಾಗವಹಿಸದೆ ವಾಪಸಾಗಬೇಕು. ಕಾಯ್ದೆಗಳನ್ನು ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.

‘ಗೋ ಬ್ಯಾಕ್ ಅಮಿತ್ ಶಾ’ ಎಂದು ಘೋಷಣೆ ಕೂಗಿದರು. ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಕುರ್ಚಿ ಹಾಕಿ, ಮಹಾತ್ಮ ಗಾಂಧಿ ಫೋಟೊ ಇಟ್ಟು ಧರಣಿ ಮುಂದುವರಿಸಿದ್ದರು.

ಬಳಿಕ ಪೊಲೀಸರು, ರಾಜ್ಯ ಸಂಚಾಲಕರಾದ ಚೂನಪ್ಪ ಪೂಜಾರಿ, ಜಯಶ್ರೀ ಗುರಣ್ಣವರ, ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ ನಾಯ್ಕ, ಮುಖಂಡ ಪ್ರಕಾಶ ನಾಯ್ಕ ಮೊದಲಾದವರನ್ನು ಬಂಧಿಸಿ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ಕರೆದೊಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.