ಬೆಳಗಾವಿ: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ ಕ್ರಮ ಖಂಡಿಸಿ, ಹಮಾರಾ ದೇಶ ಸಂಘಟನೆಯ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೇರಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಿದ್ದರಾಮಯ್ಯ ಅವರು ಮತ ಓಲೈಕೆ ಹಾಗೂ ಸ್ವಂತ ಲಾಭಕ್ಕಾಗಿ ಇಂಥ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ನಾಡಿನ ಧ್ವಜದ ಬಗ್ಗೆ, ಭುವನೇಶ್ವರಿ ಬಗ್ಗೆ ಕೆಟ್ಟದಾಗಿ ಮಾತನಾಡಿದವರನ್ನು ನಾಡಹಬ್ಬ ಉದ್ಘಾಟನೆಗೆ ಕರೆದಿದ್ದಾರೆ. ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡುವುದು ಇವರ ಉದ್ದೇಶ ಎಂದು ಕಿಡಿ ಕಾರಿದರು.
ದಸರಾ ಹಬ್ಬವು ನಾಡಿನ ಸಂಸ್ಕೃತಿ, ನಂಬಿಕೆಗಳ ಪ್ರತೀಕವಾಗಿದೆ. ಪವಿತ್ರ ದಸರಾ ಹಬ್ಬದಲ್ಲೂ ರಾಜಕೀಯ ತಂದು ಹಿಂದೂಗಳ ಭಾವನೆಗಳಿಗೆ ಹಾಗೂ ನಾಡಿನ ಸಂಸ್ಕೃತಿ, ಪರಂಪರೆಗೆ ಧಕ್ಕೆ ತರುವಂತಹ ಕೆಲಸ ಮಾಡುತ್ತಿರುವುದು ಸರಿಯಲ್ಲ. ಕೂಡಲೇ ರಾಜ್ಯ ಸರ್ಕಾರ ತನ್ನ ನಿರ್ಧಾರ ಬದಲಾಯಿಸಿಕೊಳ್ಳಬೇಕು. ಜೊತೆಗೆ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ, ರಾಜ್ಯಪಾಲರು ಮಧ್ಯಪ್ರವೇಶಿಸಿ ದಸರೆಯನ್ನು ರಾಜಕೀಯ ಹತ್ತಕ್ಷೇಪದಿಂದ ಮುಕ್ತಗೊಳಿಸಬೇಕು ಮನವಿ ಮಾಡಿದರು.
ಮುಖಂಡರಾದ ಸಂದೀಪ ಪಿಳ್ಳೆ, ಮನೋಜ ಕೊಲ್ಲಾಪುರೆ, ವೆಂಕಟೇಶ ಶಿಂಧೆ ನೇತೃತ್ವ ವಹಿಸಿದ್ದರು.
ಗಣೇಶ ಮೂರ್ತಿ ವಿಸರ್ಜನೆ ಅವ್ಯವಸ್ಥೆ: ಪ್ರತಿಭಟನೆ ಬೆಳಗಾವಿ ನಗರದಲ್ಲಿ ನಡೆದ ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಅವ್ಯವಸ್ಥೆ ನಡೆದಿದೆ. ಸರಿಯಾದ ನಿರ್ಧಾರ ತೆಗೆದುಕೊಳ್ಳದ ಕಾರಣ ಮೆರವಣಿಗೆ ತೀವ್ರ ವಿಳಂಬವಾಗಿದೆ ಎಂದು ಆರೋಪಿಸಿ ಜಯ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಬುಧವಾರ ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರಿಗೆ ಮೆರವಣಿಗೆ ಮೂಲಕ ತೆರಳಿದ ಪ್ರತಿಭಟನಾಕಾರರು ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳು ಸರಿಯಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳದ ಕಾರಣ ಗಣೇಶ ವಿಸರ್ಜನೆ ತಡವಾಗಿದೆ. ಇದರಿಂದ ಸಾರ್ವಜನಿಕರು ಬೀದಿಬದಿ ವ್ಯಾಪಾರಿಗಳು ಹಾಗೂ ಶಾಲಾ–ಕಾಲೇಜು ಮಕ್ಕಳು ಸಮಸ್ಯೆಗಳನ್ನು ಎದುರಿಸುವಂತಾಯಿತು. ಇನ್ನು ಮುಂದೆ ಈ ರೀತಿ ನಡೆಯದಂತೆ ಸಂಬಂಧಪಟ್ಟ ಇಲಾಖೆಗಳು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು. ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ರಜಪೂತ ಸಚಿನ ನಾಯಕ ಪ್ರವೀಣ ಪಾಟೀಲ ಇತರರು ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.