ADVERTISEMENT

ಮಳೆ ಹಾನಿ: ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2019, 13:53 IST
Last Updated 24 ಜೂನ್ 2019, 13:53 IST
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ    

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾ ಮೊದಲಾದ ಭಾಗಗಳಲ್ಲಿ ಭಾನುವಾರ ಮಳೆಯ ರಭಸದಿಂದ ಆಗಿರುವ ಅವಾಂತರ, ಆಸ್ಪತ್ರೆಗೆ ನೀರು ನುಗ್ಗಿರುವುದು ಹಾಗೂ ವಾಹನಗಳು ಕೊಚ್ಚಿಕೊಂಡು ಹೋಗಿರುವ ಕುರಿತು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜಿಲ್ಲಾಧಿಕಾರಿಗೆ ಕರೆ ಮಾಡಿ ಮಾಹಿತಿ ಪಡೆದರು.

ಭಾರಿ ಮಳೆಯಿಂದಾಗಿ ಯಕ್ಸಂಬಾದಲ್ಲಿ ವಾಹನಗಳು ಕೊಚ್ಚಿ ಹೋಗಿರುವ ಬಗ್ಗೆ ಮಾಧ್ಯಮದಲ್ಲಿ ಬಂದ ವರದಿ ಗಮನಿಸಿದ ಅವರು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ‘ರಸ್ತೆಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಗಳು ಮತ್ತು ಕೆಲವು ಕಾರುಗಳು ಮಳೆಯ ರಭಸಕ್ಕೆ ಕೊಂಚ ದೂರದವರೆಗೆ ತೇಲಿಕೊಂಡು ಹೋಗಿವೆ. ಯಾವುದೇ ರೀತಿಯ ಹಾನಿಯಾಗಿಲ್ಲ. ಆಸ್ಪತ್ರೆಗೆ ನೀರು ನುಗ್ಗಿತ್ತು. ಕೆಲ ಹೊತ್ತಿನಲ್ಲಿಯೇ ನೀರನ್ನು ಹೊರಕ್ಕೆ ಹಾಕಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಮಾಹಿತಿ ನೀಡಿದರು.

‘ಮಳೆಗಾಲ ಆರಂಭಗೊಂಡಿರುವುದರಿಂದ ಜನರ ಜೀವ, ಆಸ್ತಿಪಾಸ್ತಿಗಳ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಮುಖ್ಯಮಂತ್ರಿ ಸೂಚಿಸಿದರು.

ADVERTISEMENT

‘ಮಳೆಗಾಲ ಮತ್ತು ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಸೂಕ್ತ ನಿರ್ದೇಶನ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.