ADVERTISEMENT

ಹಲವು ದಿನಗಳ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡ ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 8 ಮೇ 2021, 11:59 IST
Last Updated 8 ಮೇ 2021, 11:59 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ   

ಗೋಕಾಕ (ಬೆಳಗಾವಿ ಜಿಲ್ಲೆ): ಸಿ.ಡಿ. ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು‌‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಹಾಗೂ ಕೋವಿಡ್–19 ಬಾಧಿತರಾಗಿ ಚೇತರಿಸಿಕೊಂಡ ನಂತರ ಬಿಜೆಪಿ ‌ಶಾಸಕ ರಮೇಶ ಜಾರಕಿಹೊಳಿ ಇದೇ ಮೊದಲಿಗೆ ಸಾರ್ವಜನಿಕವಾಗಿ ಶನಿವಾರ ಕಾಣಿಸಿಕೊಂಡರು.

ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ‘ತಾಲ್ಲೂಕಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚದಂತೆ ನೋಡಿಕೊಳ್ಳಬೇಕು. ಕೊರೊನಾ ಸರಪಳಿ ತುಂಡರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಅನುಷ್ಠಾನಕ್ಕೆ ಕ್ರಮ ವಹಿಸಬೇಕು’ ಎಂದು ಸೂಚಿಸಿದರು.

‘ಆಮ್ಲಜನಕ ಕೊರತೆ ನೀಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ಕೈಗೊಂಡಿವೆ. ಕೆಲವೇ ದಿನಗಳಲ್ಲಿ ಸಮಸ್ಯೆಗೆ ಪರಿಹಾರ ದೊರೆಯಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ‘ಸಾರ್ವಜನಿಕರು ಅನವಶ್ಯವಾಗಿ ಮನೆಯಿಂದ ಹೊರಬಾರದೆ ಸಹಕರಿಸಬೇಕು’ ಎಂದು ಕೋರಿದರು.

ADVERTISEMENT

ಕೋವಿಡ್ ಕಾರಣದಿಂದ ಇಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬಿಡುಗಡೆ ಆಗಿದ್ದ ಅವರು ವೈದ್ಯರ ಸಲಹೆಯಂತೆ ಹೊಂ ಐಸೊಲೇಷನ್ ಆಗಿದ್ದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದಲ್ಲಿ ಕಾಣಿಸಿಕೊಂಡಿರಲಿಲ್ಲ. ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಎದುರು ವಿಚಾರಣೆಗೂ ಹಾಜರಾಗಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.