ADVERTISEMENT

ಹತಾಶರಾಗಿ ನಮ್ಮ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ ಡಿಕೆಶಿ: ರಮೇಶ ಟೀಕೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 16:20 IST
Last Updated 15 ಅಕ್ಟೋಬರ್ 2020, 16:20 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ   

ಬೆಳಗಾವಿ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರುಉಪ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಹತಾಶರಾಗಿ ನಮ್ಮ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಅವರ ಹೇಳಿಕೆಗೆ ನಾವು ಪ್ರತಿಕ್ರಿಯಿಸುವ ಅಗತ್ಯವಿಲ್ಲ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಅವರ ಹತಾಶೆಯ ಮಾತುಗಳಿಗೆ ಕಾರಣವೇನು ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ’ ಎಂದರು.

‘ಆರ್‌.ಆರ್. ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಚುನಾವಣೆಗೆ ಸಂಬಂಧ ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಬಾಲಚಂದ್ರ ಜಾರಕಿಹೊಳಿ ಹಾಗೂ ಉಮೇಶ ಕತ್ತಿ ಅವರು ಹೇಳಿದ್ದೇ ಅಂತಿಮ’ ಎಂದರು.

ಮಹದಾಯಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಯೋಜನೆಗೆ ಅಡ್ಡಿಪಡಿಸಲು ಗೋವಾ ತಕರಾರು ಅರ್ಜಿ ಸಲ್ಲಿಸಿದೆ. ಅದರಿಂದ ನಮಗೆ ಅಂಜಿಕೆ ಇಲ್ಲ. ಈ ವಿಷಯದಲ್ಲಿ ಗೋವಾ ರಾಜ್ಯಕ್ಕೆ ಮುಖಭಂಗವಾಗಲಿದೆ. ಮಹದಾಯಿ ಯೋಜನೆ ಸಂಬಂಧ ಗೋವಾ ಸರ್ಕಾರವು ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಿಷಯಗಳನ್ನು ಪ್ರಸ್ತಾಪ ಮಾಡುತ್ತಿದ್ದರೂ ಅದಕ್ಕೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಮ್ಮ ನೀರಿನ ಹಕ್ಕು ನಮಗೆ ಲಭಿಸುತ್ತದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.