ಬೆಳಗಾವಿಯ ರಾಣಿ ಚನ್ನಮ್ಮನ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ
ಬೆಳಗಾವಿ: ಬೆಂಗಳೂರಿನಲ್ಲಿ ಆರ್‌ಸಿಬಿ ತಂಡದ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತದಿಂದ 11 ಜನರ ಸಾವಿಗೆ ಕಾರಣರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ತಕ್ಷಣವೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ, ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಮಾಜಿ ಶಾಸಕ ಸಂಜಯ ಪಾಟೀಲ, ‘ಈ ಸಂಭ್ರಮಾಚರಣೆಗೆ ಸಿದ್ಧತೆ ಮಾಡಿಕೊಂಡಿರಲಿಲ್ಲ. ಅನುಮತಿಯೂ ಸಿಕ್ಕಿರಲಿಲ್ಲ. ಆದರೂ, ಕಾರ್ಯಕ್ರಮ ನಡೆಸಿದ್ದರಿಂದ 11 ಮಂದಿ ಅಮಾಯಕ ಜನರು ಸಾವನ್ನಪ್ಪಿದ್ದಾರೆ. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಘಟನೆಗೆ ಕಾರಣ’ ಎಂದು ದೂರಿದರು.
‘ಕಾಂಗ್ರೆಸ್‌ನಲ್ಲಿರುವ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತಿತರ ನಾಯಕರಿಗೆ ಅಧಿಕಾರ ಅನುಭವಿಸುವುದನ್ನು ಬಿಟ್ಟರೆ, ಜನರ ಸಂಕಷ್ಟಗಳ ಬಗ್ಗೆ ಚಿಂತೆಯೇ ಇಲ್ಲ. ಈ ಪ್ರಕರಣದ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ಶಿವಕುಮಾರ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಡಬೇಕು’ ಎಂದು ಆಗ್ರಹಿಸಿದರು.
ಮಹಾನಗರ ಪಾಲಿಕೆ ಸದಸ್ಯರಾದ ಹನುಮಂತ ಕೊಂಗಾಲಿ, ರಾಜಶೇಖರ ಡೋಣಿ, ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ, ಮಹಾನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಉಜ್ವಲಾ ಬಡವಣಾಚೆ, ಮುರುಘೇಂದ್ರಗೌಡ ಪಾಟೀಲ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.