ADVERTISEMENT

ಗಣರಾಜ್ಯೋತ್ಸವ ಸರಳ ಆಚರಣೆ: ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜನೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 13:51 IST
Last Updated 13 ಜನವರಿ 2021, 13:51 IST
ಬೆಳಗಾವಿಯಲ್ಲಿ ಬುಧವಾರ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿದರು
ಬೆಳಗಾವಿಯಲ್ಲಿ ಬುಧವಾರ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿದರು   

ಬೆಳಗಾವಿ: ‘ಕೋವಿಡ್-19 ಕಾರಣದಿಂದ ಈ ಬಾರಿ ಗಣರಾಜ್ಯೋತ್ಸವವನ್ನು (ಜ.26) ಜಿಲ್ಲಾ ಕ್ರೀಡಾಂಗಣದಲ್ಲಿ ಸರಳ ಮತ್ತು ಅರ್ಥಪೂರ್ಣವಾಗಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಇಲ್ಲಿ ಬುಧವಾರ ನಡೆದ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಇದು ರಾಷ್ಟ್ರೀಯ ಹಬ್ಬವಾಗಿರುವುದರಿಂದ ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ಪೊಲೀಸ್ ಇಲಾಖೆಯವರು ಕವಾಯತುಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಹಾಗೂ ಪೂರ್ವಾಭ್ಯಾಸ ನಡೆಸಬೇಕು. ಈ ಬಾರಿ ಶಾಲಾ ಮಕ್ಕಳಿಂದ ಯಾವುದೇ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಕವಾಯತು ಕೂಡ ನಡೆಯುವುದಿಲ್ಲ’ ಎಂದರು.

ADVERTISEMENT

‘ಉಪ ಸಮಿತಿಗಳು ಸಭೆ ನಡೆಸಿ ಎಲ್ಲ ಪೂರ್ವ ಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳಬೇಕು. ಎಲ್ಲ ದೇವಾಲಯ, ಮಸೀದಿ, ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಕ್ರಮ‌ ಕೈಗೊಳ್ಳಬೇಕು. ಪ್ರಮುಖ ವೃತ್ತಗಳನ್ನು ಸ್ವಚ್ಛಗೊಳಿಸಿ ದೀಪಾಲಂಕಾರ ಮಾಡಬೇಕು. ಸರ್ಕಾರಿ ಕಚೇರಿಗಳನ್ನೂ ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಿಹಿ ಹಂಚಲು ಆಸಕ್ತರಾದ ಸಂಘ-ಸಂಸ್ಥೆಗಳು ಜಿಲ್ಲಾಡಳಿತದಿಂದ ಪೂರ್ವಾನುಮತಿ ಪಡೆಯಬೇಕು’ ಎಂದು ಹೇಳಿದರು.

‘ಜಿಲ್ಲೆಯ ಎಲ್ಲ ಕಡೆಗಳಲ್ಲೂ ಧ್ವಜಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ರಾಷ್ಟ್ರಧ್ವಜಕ್ಕೆ ಯಾವುದೇ ಕಾರಣಕ್ಕೂ ಅವಮಾನ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಧ್ವಜ ಕಟ್ಟುವುದಕ್ಕೆ ಸಂಬಂಧಿಸಿದಂತೆ ಭಾರತ ಸೇವಾದಳದಿಂದ ತರಬೇತಿ ನೀಡಲಾಗುವುದು. ಬೆಳಿಗ್ಗೆ 7.15ರಿಂದ 8.15ರ ಒಳಗೆ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ ಜಿಲ್ಲಾ ಕ್ರೀಡಾಂಗಣಕ್ಕೆ ಬರಬೇಕು. ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ಒಳಗೊಂಡ ಆರೋಗ್ಯ ಇಲಾಖೆಯ ತಂಡಗಳನ್ನು ನಿಯೋಜಿಸಬೇಕು’ ಎಂದು ಸೂಚಿಸಿದರು.

‘ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಂಡು ಸಮಾರಂಭದಲ್ಲಿ ಭಾಗವಹಿಸಬೇಕು’ ಎಂದು ಕೋರಿದರು.

ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್, ಮಹಾನಗರ ಪಾಲಿಕೆಯ ಆಯುಕ್ತ ಕೆ.ಎಚ್. ಜಗದೀಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.