
ಬೆಳಗಾವಿ: ‘ಕರ್ನಾಟಕವನ್ನು ‘ಸರ್ವಜನಾಂಗದ ಶಾಂತಿಯ ತೋಟ’ವೆಂದು ರಾಷ್ಟ್ರಕವಿ ಕುವೆಂಪು ವ್ಯಾಖ್ಯಾನಿಸಿದ್ದಾರೆ. ಗಣತಂತ್ರ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ಆಶಯಗಳನ್ನು ಇರಿಸಿಕೊಂಡು ಎಲ್ಲರೂ ಸಹಬಾಳ್ವೆಯಿಂದ ಬಾಳೋಣ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕರೆ ನೀಡಿದರು.
ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
‘ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮ ಅಧಿಕಾರ ಕಲ್ಪಿಸಿಕೊಟ್ಟ ದಿನವಾಗಿದೆ. ಸಾಮಾಜಿಕ ನ್ಯಾಯ, ಸರ್ವರಿಗೂ ಸಮಾನತೆ, ವ್ಯಕ್ತಿ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಗಳು ಸಂವಿಧಾನ ನಮಗೆ ನೀಡಿದ ಬಹುದೊಡ್ಡ ಕೊಡುಗೆಗಳಾಗಿವೆ’ ಎಂದು ಹೇಳಿದರು.
‘ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ 4.24 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಇದರಲ್ಲಿ ಶೇ 100ರಷ್ಟು ಸಾಧನೆ ಮಾಡಿ, 60 ಸಾವಿರ ರೈತರಿಗೆ 24 ಸಾವಿರ ಕ್ವಿಂಟಲ್ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ಪೂರೈಸಿದ್ದೇವೆ’ ಎಂದು ಹೇಳಿದರು.
‘ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ 1 ಸಾವಿರ ಹೆಕ್ಟೇರ್ ಕಬ್ಬು ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಹಾಗೂ ಸಮತೋಲನ ಪೋಷಕಾಂಶ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ ಜಾರಿಗೊಳಿಸಲಾಗಿದೆ’ ಎಂದರು.
ಪೊಲೀಸರು, ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಎನ್‌ಸಿಸಿ ಕೆಡೆಟ್‌ಗಳು ಆಕರ್ಷಕ ಪಥಸಂಚಲನ ನಡೆಸಿದರು.
ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ರಾಜ್ಯಸಭೆ ಮಾಜಿ ಸದಸ್ಯ ಪ್ರಭಾಕರ ಕೋರೆ ಸೇರಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.
ಶಾಸಕ ಆಸಿಫ್ ಸೇಠ್, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇದ್ದರು.
ಹಸಿವು ಮುಕ್ತ ಕರ್ನಾಟಕ ನಿರ್ಮಾಣವೇ ನಮ್ಮ ಧ್ಯೇಯ. ಇದಕ್ಕಾಗಿ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ
–ಸತೀಶ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.