ADVERTISEMENT

ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಲೇ ಸಚಿವರಿಂದ ಪ್ರಗತಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2019, 16:05 IST
Last Updated 23 ಜೂನ್ 2019, 16:05 IST
ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಭಾನುವಾರ ಬೆಳಗಾವಿಯಿಂದ ಹುಬ್ಬಳ್ಳಿ ಮಾರ್ಗವಾಗಿ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಲೇ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಎ.ಕೆ. ಸಿಂಗ್ ಇದ್ದಾರೆ
ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಭಾನುವಾರ ಬೆಳಗಾವಿಯಿಂದ ಹುಬ್ಬಳ್ಳಿ ಮಾರ್ಗವಾಗಿ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಲೇ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಎ.ಕೆ. ಸಿಂಗ್ ಇದ್ದಾರೆ   

ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಭಾನುವಾರ ಬೆಳಗಾವಿಯಿಂದ ಹುಬ್ಬಳ್ಳಿಗೆ ವಿಶೇಷ ರೈಲಿನಲ್ಲಿ (ವಿಂಡೋ ಟ್ರ್ಯಾಕಿಂಗ್– ಪರಿಶೀಲನೆಗೆ ಬಳಸುವ ರೈಲು) ಅಧಿಕಾರಿಗಳೊಂದಿಗೆ ಪ್ರಯಾಣಿಸುತ್ತಲೇ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಗಮನಸೆಳೆದರು.

ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ ನಿಲ್ದಾಣಗಳಲ್ಲಿ ಇಳಿದು ಪ್ರಯಾಣಿಕರ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ರೈಲು ಮಾರ್ಗ ಹಾಗೂ ನಿಲ್ದಾಣಗಳಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿದರು. ಪಕ್ಷದ ಕಾರ್ಯಕರ್ತರು ಅವರನ್ನು ಸತ್ಕರಿಸಿದರು. ಹುಬ್ಬಳ್ಳಿ–ಬೆಳಗಾವಿ ರೈಲು ಮಾರ್ಗದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಜೋಡಿ ಮಾರ್ಗದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಸಮಯ ಪಾಲನೆ ಹಾಗೂ ರೈಲುಗಳು ಮತ್ತು ನಿಲ್ದಾಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಇದಕ್ಕೂ ಮುಂಚೆ ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪುಣೆಯಿಂದ ತುಮಕೂರುವರೆಗೆ ಜೋಡಿ ಮಾರ್ಗದ ಕಾಮಗಾರಿ ನಡೆದಿದೆ. ಬೆಳಗಾವಿ ಹಾಗೂ ಹುಬ್ಬಳ್ಳಿಯ ಮಧ್ಯೆ ಈ ಕಾಮಗಾರಿ ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಲು ಹಾಗೂ ಮಾರ್ಗದಲ್ಲಿನ ಇನ್ನಿತರ ಸಮಸ್ಯೆಗಳನ್ನು ವೀಕ್ಷಿಸುವ ಜೊತೆಗೆ ಚರ್ಚೆ ನಡೆಸುವ ಉದ್ದೇಶದಿಂದ ಅಧಿಕಾರಿಗಳೊಂದಿಗೆ ತೆರಳುತ್ತಿದ್ದೇನೆ. ಜೋಡಿ ಮಾರ್ಗದ ಕಾಮಗಾರಿ ಪೂರ್ಣಗೊಂಡ ನಂತರ ಹೆಚ್ಚುವರಿ ರೈಲುಗಳನ್ನು ಓಡಿಸಲು ಸಾಧ್ಯವಾಗಲಿದೆ’ ಎಂದು ತಿಳಿಸಿದರು.

ADVERTISEMENT

ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಎ.ಕೆ. ಸಿಂಗ್ ಹಾಗೂ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.