ADVERTISEMENT

ಬೆಳಗಾವಿ | ವರ್ತುಲ ರಸ್ತೆ: ರಾಜ್ಯ ಸರ್ಕಾರದಿಂದ ₹ 140 ಕೋಟಿ

​ಪ್ರಜಾವಾಣಿ ವಾರ್ತೆ
Published 4 ಜೂನ್ 2021, 16:35 IST
Last Updated 4 ಜೂನ್ 2021, 16:35 IST

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ 4ಎನಲ್ಲಿನ ಝಾಡಶಹಾಪುರ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿನ ಬೆನ್ನಾಳಿ ಗ್ರಾಮದವರೆಗೆ ನಿರ್ಮಿಸಲಿರುವ ನಾಲ್ಕು ಪಥಗಳ ರಿಂಗ್‌ (ವರ್ತುಲ) ರಸ್ತೆ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೊಳ್ಳುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ರಾಜ್ಯದ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ದ ಅಧ್ಯಕ್ಷ ಡಾ.ಸುಖ್‌ಬಿರ್ ಸಿಂಗ್ ಸಂಧು ಅವರಿಗೆ ತಿಳಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಪತ್ರ ಬರೆದಿರುವ ಅವರು, ‘ಸಮಗ್ರ ಯೋಜನಾ ವರದಿ ಅಂತಿಮ ಹಂತದಲ್ಲಿದೆ ಎಂದು ಎನ್‌ಎಚ್‌ಎಐ ಪ್ರಾದೇಶಿಕ ಅಧಿಕಾರಿ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. 69.25 ಕಿ.ಮೀ. ಮಾರ್ಗದ ಈ ರಸ್ತೆಗಾಗಿ ಭೂಸ್ವಾಧೀನಕ್ಕಾಗಿ ₹ 280 ಕೋಟಿ ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಶೇ 50ರಷ್ಟು ಭರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ’.

‘ಆ ಪ್ರಸ್ತಾವವನ್ನು ಪರಿಶೀಲಿಸಿದ ನಂತರ ₹ 140 ಕೋಟಿ ಭರಿಸಲು ಅನುಮೋದನೆ ನೀಡಲಾಗಿದೆ. ಪ್ರಾಧಿಕಾರವು ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.

ADVERTISEMENT

ಇದರೊಂದಿಗೆ ಇಲ್ಲಿನ ಜನರ ಬಹುದಿನಗಳ ಬೇಡಿಕೆ ಈಡೇರುವ ಲಕ್ಷಣಗಳು ಕಾಣಿಸುತ್ತಿವೆ. ವರ್ತುಲ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಭೂಸ್ವಾಧೀನ ವೆಚ್ಚದ ಶೇ 50ರಷ್ಟು ಮೊತ್ತ ಅಂದರೆ ₹ 140 ಕೋಟಿ ಒದಗಿಸಲು ಕ್ರಮ ವಹಿಸಲಾಗುವುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಘೋಷಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.