ಬೆಳಗಾವಿ: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ದಿನನಿತ್ಯ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಬಳಸಿಕೊಂಡು ರಸ್ತೆ ನಿರ್ಮಾಣ ಮಾಡುವ ವಿನೂತನ ಯೋಜನೆ ಕೈಗೆತ್ತಿಕೊಳ್ಳಲು ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ವಿಲಾಸ ಜೋಶಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದ್ದು, ಪ್ರಾಯೋಗಿಕವಾಗಿ ಮಹಾನಗರ ಪಾಲಿಕೆಯ ಮುಂಭಾಗದಲ್ಲಿರುವ ರಸ್ತೆಯನ್ನು ನಿರ್ಮಿಸಲು ಯೋಜನೆ ರೂಪಿಸಲಾಯಿತು.
‘ಶೇ 6ರಿಂದ ಶೇ 8ರಷ್ಟು ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಿರ್ಮಿಸುವ ರಸ್ತೆಯು ಡಾಂಬರೀಕರಣ ರಸ್ತೆಗಿಂತ ಇದರ ನಿರ್ಮಾಣ ವೆಚ್ಚ, ಬಾಳಿಕೆ ಹಾಗೂ ಗುಣಮಟ್ಟದಲ್ಲಿ ಉತ್ತಮವಾಗಿರುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ’ ಎಂಬ ಮಾಹಿತಿಯನ್ನು ವಾಣಿ ಜೋಶಿ ಅವರು ಸಭೆಗೆ ನೀಡಿದರು.
ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿದ ನಂತರ ಅದರ ಗುಣಮಟ್ಟ ಹಾಗೂ ಬಾಳಿಕೆಯನ್ನು ಆಧರಿಸಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಇತರ ರಸ್ತೆಗಳನ್ನು ನಿರ್ಮಿಸುವ ಯೋಜನೆಯನ್ನು ರೂಪಿಸಲಾಗುವುದು ಎಂದೂ ತಿಳಿಸಿದರು.
ಸಭೆಯಲ್ಲಿ ಉಪಮೇಯರ್ ರೇಷ್ಮಾ ಪಾಟೀಲ, ಪಾಲಿಕೆ ಪರಿಷತ್ ಕಾರ್ಯದರ್ಶಿ ಉದಯಕುಮಾರ ತಳವಾರ್, ಎಂಜಿನಿಯರ್ ಲಕ್ಷ್ಮೀ ನಿಪ್ಪಾಣಿಕರ ಮುಂತಾದವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.