ADVERTISEMENT

ಆರ್‌ಎಸ್‌ಎಸ್‌ ಮುಸ್ಲಿಂ ವಿರೋಧಿಯಲ್ಲ: ರಮೇಶ ಜಾರಕಿಹೊಳಿ

ದೇಶ ಬಲಿಷ್ಠಗೊಳಿಸಲು ಶ್ರಮಿಸುತ್ತಿರುವ ಸಂಘಟನೆ: ರಮೇಶ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2020, 12:19 IST
Last Updated 7 ನವೆಂಬರ್ 2020, 12:19 IST
ಗೋಕಾಕದಲ್ಲಿ ಶನಿವಾರ ನಗರಸಭೆ ಸಮುದಾಯದ ಭವನದಲ್ಲಿ ಬಿಜೆಪಿ ಗ್ರಾಮೀಣ ಮಂಡಲ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಾತನಾಡಿದರು
ಗೋಕಾಕದಲ್ಲಿ ಶನಿವಾರ ನಗರಸಭೆ ಸಮುದಾಯದ ಭವನದಲ್ಲಿ ಬಿಜೆಪಿ ಗ್ರಾಮೀಣ ಮಂಡಲ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಾತನಾಡಿದರು   

ಗೋಕಾಕ: ‘ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್‌ಎಸ್ಎಸ್‌) ಮುಸ್ಲಿಮರ ವಿರೋಧಿಯಲ್ಲ. ದೇಶ ಬಲಿಷ್ಠಗೊಳಿಸಲು ಶ್ರಮಿಸುತ್ತಿರುವ ಸಂಘಟನೆ ಇದಾಗಿದೆ’ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಇಲ್ಲಿನ ನಗರಸಭೆ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಕ್ಷದ ಗೋಕಾಕ ಗ್ರಾಮೀಣ ಮಂಡಲ ಪದಾಧಿಕಾರಿಗಳಿಗಾಗಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಪ್ರಶಿಕ್ಷಣ ವರ್ಗದ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ನಾನು ಕೂಡ ಬಾಲ್ಯದಿಂದಲೇ ಆರ್.ಎಸ್.ಎಸ್. ಕಾರ್ಯಕ್ರಮಗಳಿಲ್ಲಿ ಪಾಲ್ಗೊಂಡು ಅಲ್ಲಿನ ಶಿಸ್ತು ಮತ್ತು ತತ್ವಬದ್ಧ ಸಿದ್ಧಾಂತ, ನೀತಿಗಳನ್ನು ಮನಗಂಡಿದ್ದರಿಂದಲೆ ಇಂದು ಭಾರತೀಯ ಜನತಾ ಪಕ್ಷದಲ್ಲಿ ಕಾರ್ಯನಿರ್ವಹಿಸುವುದು ಸಲೀಸಾಗುತ್ತಿದ್ದೆ’ ಎಂದರು.

ADVERTISEMENT

‘ಶಿಬಿರದಲ್ಲಿ ಪಾಲ್ಗೊಂಡವರು ಪಕ್ಷದ ಸಿದ್ಧಾಂತಗಳ ಬಗ್ಗೆ ಕಲಿತು ಕಾರ್ಯಕರ್ತರಿಗೆ ತಲುಪಿಸುವ ಮೂಲಕ ಸಂಘಟನೆ ಬಲಿಷ್ಠಗೊಳಿಸಬೇಕು’ ಎಂದು ತಿಳಿಸಿದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ‘ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷ ಪಕ್ಷವಾಗಿದೆ. ಸಾಮಾನ್ಯ ಕಾರ್ಯಕರ್ತನಿಗೂ ಹೆಚ್ಚಿನ ಅವಕಾಶಗಳು ಇಲ್ಲಿವೆ. ಇದಕ್ಕೆ ಬಹಳಷ್ಟು ಉದಾಹರಣೆಗಳು ನಮ್ಮ ಕಣ್ಮುಂದಿವೆ. ಉಳಿದ ಪಕ್ಷಗಳಿಗಿಂತ ಭಿನ್ನವಾದ ರೀತಿಯಲ್ಲಿ ಕಾರ್ಯನಿರ್ವಹಿಸಿ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮೌಲ್ಯಾಧಾರಿತವಾಗಿ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಕಾರ್ಯನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುಭಾಷ ಪಾಟೀಲ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಇದ್ದರು.

ಎಲ್.ಎಚ್. ಬಂಡಿ ಸ್ವಾಗತಿಸಿದರು.

‘ಶಾಲೆ ಆರಂಭದ ಬಗ್ಗೆ ನಿರ್ಧಾರವಾಗಿಲ್ಲ’

ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಂತೆ ಯಾವುದೇ ನಿರ್ಧಾರವಾಗಿಲ್ಲ. ಈ ಬಗ್ಗೆ ಶಿಕ್ಷಣ ಸಚಿವರು ಹಾಗೂ ಪ್ರಮುಖರು ಚರ್ಚಿಸಿ ನಿರ್ಧಾರ ತೀರ್ಮಾನಿಸಲಿದ್ದಾರೆ’ ಎಂದು ಸಚಿವರು ಹೇಳಿದರು.

‘ಕೋವಿಡ್ ಮಾರ್ಗಸೂಚಿಯಂತೆ ಶಾಲೆ ಆರಂಭಿಸುವ ಕುರಿತಂತೆ ಚರ್ಚೆಗಳು ನಡೆಯುತ್ತಿವೆ. ಇಷ್ಟರಲ್ಲೇ ಶಿಕ್ಷಣ ಸಚಿವರು ಮತ್ತು ಮುಖ್ಯಮಂತ್ರಿ ನಿರ್ಧಾರ ಪ್ರಕಟಿಸಲಿದ್ದಾರೆ’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

‘ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಬದಲಾವಣೆ ಪ್ರಶ್ನೆಯೇ ಇಲ್ಲ’ ಎಂದು ಪುನರುಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.