ADVERTISEMENT

ಸದಾಶಿವ ಆಯೋಗ ಶಿಫಾರಸು ಅನುಷ್ಠಾನಕ್ಕೆ ಆಗ್ರಹ: ಅರೆಬೆತ್ತಲೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2018, 9:34 IST
Last Updated 18 ಡಿಸೆಂಬರ್ 2018, 9:34 IST
   

ಬೆಳಗಾವಿ:ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿ ಮಂಗಳವಾರ ರಾಜ್ಯ ಡಾ.ಬಾಬು ಜಗಜೀವನರಾಮ್ ಜನಜಾಗೃತಿ ವೇದಿಕೆ ಕಾರ್ಯಕರ್ತರು ಸುವರ್ಣ ವಿಧಾನಸೌಧದ ಬಳಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು.

ಪರಿಶಿಷ್ಟ ಜಾತಿ, ಪಂಗಡದ ಜೇಷ್ಠತಾ ಮುಂಬಡ್ತಿ ನೀಡುವುದಕ್ಕೆ ಸಂಬಂಧಿಸಿದಂತೆ ಸುಗ್ರಿವಾಜ್ಞೆ ಹೊರಡಿಸಿ ಯಥಾಸ್ಥಿತಿಯಲ್ಲಿ ಮುಂದುವರೆಸಬೇಕು. ಲಮಾಣಿ, ಕೊರಚ, ಕೊರವ ಜಾತಿಯಲ್ಲಿ ಕಾನೂನುಬಾಹಿರವಾಗಿ ಸೇರಿಕೊಂಡಿರುವವರನ್ನು ಕೈಬಿಡಬೇಕು ಎಂದು ನ್ಯಾಯಾಲಯ ಆದೇಶ ಮಾಡಿದೆ. ಈ ಆದೇಶವನ್ನು ಸರ್ಕಾರ ಎತ್ತಿ ಹಿಡಿಯುವಲ್ಲಿ ಸಂಪೂರ್ಣ ವಿಫಲವಾಗಿದೆ. ಇನ್ನಾದರೂ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಸ್ಪೃಶ್ಯತೆ ತಡೆಯುವಲ್ಲಿ, ಸಾಮಾಜಿಕ ನ್ಯಾಯ ಕೊಡಿಸುವಲ್ಲಿ ಸರ್ಕಾರ ವಿಫಲವಾಗಿದೆ. ಅಸ್ಪೃಶ್ಯತೆ ನಿರ್ಮೂಲನೆ ಮಾಡುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಕಟ್ಟು‌‌ನಿಟ್ಟಿನ ಆದೇಶವನ್ನು ಹೊರಡಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆ ನಿರ್ಮೂಲನೆಯಾಗುವವರೆಗೆ ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬೇಕು. ರಾಜ್ಯ ಸರ್ಕಾರದಿಂದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಂಬೇಡ್ಕರ್ ಭವನ ಮತ್ತು ಬಾಬುಜಗಜೀವನರಾಂ ಭವನಗಳ ನಿರ್ಮಾಣಕ್ಕೆ ಸಾವಿರಾರು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾದರೂ ಭವನಗಳ ಕಾಮಗಾರಿ ಪೂರ್ಣಗೊಂಡಿಲ್ಲ. ಇವುಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲು ಆಯಾ ಜಿಲ್ಲಾಧಿಕಾರಿಗಳಿಗೆ, ಉಪನಿರ್ದೇಶಕರಿಗೆ, ಸಮಾಜ ಕಲ್ಯಾಣ ಇಲಾಖೆಯವರಿಗೆ ಕಟ್ಟುನಿಟ್ಟಿನ ಆದೇಶ ನೀಡಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಟಿ. ಪದ್ಮಾವತಿ, ದಾನಪ್ಪ, ಎಚ್. ಜಿ. ಸಂಕಣ್ಣ, ತಾಯಪ್ಪ ದೊಡಮನಿ, ಹುಸೇನಪ್ಪ, ಮೇಕಲ್ ವೀರೇಶ, ಶಿವಕುಮಾರ, ಪ್ರಭು, ದುರುಗೇಶ, ಅಮ್ಮನಕೇರೆ ಬಸವರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.