ಬೆಳಗಾವಿ: ಇಲ್ಲಿನ ಅನಗೋಳದ ಧರ್ಮವೀರ ಸಂಭಾಜಿ ವೃತ್ತದಲ್ಲಿ ಸಮುದಾಯ ಭವನದ ಮೇಲೆ ಪ್ರತಿಷ್ಠಾಪಿಸಿದ 21 ಅಡಿ ಎತ್ತರದ ಸಂಭಾಜಿ ಪ್ರತಿಮೆ ಅನಾವರಣಕ್ಕೆ ಜಿಲ್ಲಾಡಳಿತದಿಂದ ಇನ್ನೂ ಅನುಮತಿ ಸಿಕ್ಕಿಲ್ಲ.
ಆದರೆ, ಶಾಸಕ ಅಭಯ ಪಾಟೀಲ ನೇತೃತ್ವದ ಗುಂಪು ಭಾನುವಾರ ಸಂಜೆ 5ಕ್ಕೆ ಇದನ್ನು ಅನಾವರಣ ಮಾಡಲು ತಯಾರಿ ಮಾಡಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಭಯ ಪಾಟೀಲ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಪ್ರತಿಮೆ ಸ್ಥಳದತ್ತ ಆಗಮಿಸುತ್ತಿದ್ದಾರೆ.
ಮತ್ತೊಂದೆಡೆ, ಪ್ರತಿಮೆ ಅನಾವರಣಕ್ಕೆ ವಿರೋಧ ವ್ಯಕ್ತಪಡಿಸಿದ ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆ ಅಧ್ಯಕ್ಷ ರಮಾಕಾಂತ ಕೊಂಡೂಸ್ಕರ್ ಬೆಂಬಲಿಗರು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಹಾಗಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಯುವಕರ ಗುಂಪು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಪ್ರತಿಮೆ ಅನಾವರಣಕ್ಕಾಗಿ ಮೇಯರ್ ಸವಿತಾ ಕಾಂಬಳೆ, ಉಪಮೇಯರ್ ಆನಂದ ಚವ್ಹಾಣ ಈಗಾಗಲೇ ಬಂದಿದ್ದಾರೆ. ಬಿಜೆಪಿಯ ಹಲವು ನಾಯಕರು ಬರುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.