ADVERTISEMENT

ರಾಯಣ್ಣಗೆ ಅವಮಾನ ಖಂಡಿಸಿ ಕರವೇ ಪ್ರತಿಭಟನೆ: ಕಾರ್ಯಕರ್ತರ ವಶಕ್ಕೆ ಪಡೆದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2021, 6:42 IST
Last Updated 19 ಡಿಸೆಂಬರ್ 2021, 6:42 IST
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ   

ಬೆಳಗಾವಿ:ನಗರದ ಅನಗೋಳದ ಕನಕದಾಸ ಕಾಲೊನಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಘಟನೆ ವಿರೋಧಿಸಿ ತಾಲ್ಲೂಕಿನ ಪೀರನವಾಡಿ ಬಳಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕರವೇ (ಟಿ.ಎ. ನಾರಾಯಣಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರು ಅನಗೋಳದ ಕನಕದಾಸ ಕಾಲೊನಿಗೆ ಮೆರವಣಿಗೆಯಲ್ಲಿ ತೆರಳಲು ಮುಂದಾದ ವೇಳೆ, ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.

‘ಸಂಗೊಳ್ಳಿ ರಾಯಣ್ಣನಿಗೆ ಅವಮಾನ ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಎಂಇಎಸ್ ಪುಂಡಾಟಕ್ಕೆ ಕಡಿವಾಣ ಹಾಕಬೇಕು. ಆ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು. ಮಹಾರಾಷ್ಟ್ರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡಿಗರಿಗೆ ತೊಂದರೆ ಕೊಡುತ್ತಿರುವುದಕ್ಕೆ ತಡೆಯೊಡ್ಡಬೇಕು. ಅವರ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಇದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ.

ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪ ವೃಷ್ಟಿ ಮಾಡಿ ಸಂಗೊಳ್ಳಿರಾಯಣ್ಣನಿಗೆ ಜೈಕಾರ ಹಾಕಿದರು. ಕನ್ನಡ ಬಾವುಟಗಳು ರಾರಾಜಿಸುತ್ತಿವೆ.

ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ರಾಜ್ಯ ಘಟಕದ ಸಂಚಾಲಕ ಮಹಾದೇವ ತಳವಾರ ನೇತೃತ್ವ ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.