ADVERTISEMENT

‘ಗ್ಯಾರಂಟಿ’ ಹಣ ಸದ್ಬಳಕೆಯಾಗಲಿ: ಫಲಾನುಭವಿಗಳ ಸಮಾವೇಶದಲ್ಲಿ ಸಚಿವ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2024, 14:05 IST
Last Updated 5 ಫೆಬ್ರುವರಿ 2024, 14:05 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ   

ಬೆಳಗಾವಿ: ‘ರಾಜ್ಯದಲ್ಲಿ ನಾವು ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳ ಹಣವನ್ನು ಮಕ್ಕಳ ವಿದ್ಯಾಭ್ಯಾಸ ಮತ್ತು ಕುಟುಂಬದ ಉನ್ನತಿಗಾಗಿ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೋರಿದರು.

‌ಇಲ್ಲಿನ ಸರ್ಕಾರಿ ಸರ್ದಾರ್ಸ್ ‍ಪ್ರೌಢಶಾಲೆ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ ಹಾಗೂ ಯುವನಿಧಿ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

‘ಜನರು ಆರ್ಥಿಕವಾಗಿ ಸಬಲರಾಗಬೇಕೆಂಬ ಕಾರಣಕ್ಕೆ, ಅನೇಕ ಸವಾಲುಗಳ ಮಧ್ಯೆಯೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಈ ಯೋಜನೆಗಾಗಿ ಪ್ರತಿವರ್ಷ ₹60 ಸಾವಿರ ಕೋಟಿ ವ್ಯಯಿಸುತ್ತಿದ್ದೇವೆ. ಹೀಗಾಗಿ ಗ್ಯಾರಂಟಿ ರೂಪದಲ್ಲಿ ಸಿಕ್ಕ ಹಣವನ್ನು ನ್ಯಾಯಯುತವಾಗಿ ಬಳಸಿಕೊಳ್ಳಬೇಕು. ಮನೆ ನಿರ್ಮಾಣ ಮತ್ತು ಇತರೆ ಅಗತ್ಯಗಳನ್ನು ಪೂರೈಸಿಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

‘ಮುಂದಿನ ಬಜೆಟ್‌ನಲ್ಲಿ ಹೊಸ ಶಾಲೆಗಳು, ಆಸ್ಪತ್ರೆಗಳು ಮತ್ತು ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ನೀಡುತ್ತೇವೆ. ಮುಂದಿನ ಮೂರು ವರ್ಷದೊಳಗೆ ಜಿಲ್ಲೆಯಲ್ಲಿ ಅತ್ಯುತ್ತಮ ರಸ್ತೆಗಳ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಕ್ರಮ ವಹಿಸಲಾಗುವುದು. ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್‌ ಆಸ್ಪತ್ರೆ ತೆರೆಯಲಾಗುವುದು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರವೇ ಕಾರ್ಯಾರಂಭ ಮಾಡಲಿದೆ’ ಎಂದರು.

‘ಬಡವರ ಮಕ್ಕಳಿಗೆ ಧ್ವಜ ನೀಡಿ ವಿವಾದ ಸೃಷ್ಟಿಸುವವರ ಮಕ್ಕಳು ವಿದೇಶಗಳಲ್ಲಿ ಉನ್ನತ‌ ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ಹುನ್ನಾರಗಳ ಬಗ್ಗೆ ಜನರು ಎಚ್ಚರ ವಹಿಸಬೇಕು. ನಮಗೆ ಬೇಕಾಗಿರುವುದು ಧ್ವಜ ವಿವಾದವಲ್ಲ; ಅಭಿವೃದ್ಧಿ’ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ‘ವಿಧಾನಸಭೆ ಚುನಾವಣೆಯಲ್ಲಿ ನಾವು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದಾಗ, ಬಿಜೆಪಿಯವರು ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಆದರೆ, ಈಗ ಅವರೇ ಗ್ಯಾರಂಟಿಗಳ ಹೆಸರಿನಲ್ಲಿ ದೊಡ್ಡ ಹೋರ್ಡಿಂಗ್‌ಗಳನ್ನು ಪ್ರದರ್ಶಿಸಲು ಆರಂಭಿಸಿದ್ದಾರೆ. ಗ್ಯಾರಂಟಿ ಎಂಬ ಪದ ನಾವೇ ಹುಟ್ಟುಹಾಕಿದ್ದು. ಅದನ್ನು ವಿರೋಧಿಸಿದವರು ಈಗ ಬಳಸಿಕೊಳ್ಳುತ್ತಿದ್ದಾರೆ’ ಎಂದರು.

‘ಬಿಜೆಪಿ ಸರ್ಕಾರವು ಅಂಬಾನಿ ಮತ್ತು ಅದಾನಿಯವರ ಸಾಲ ಮನ್ನಾ ಮಾಡಿದೆ. ಆದರೆ, ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ನೆರವಿಗೆ ಧಾವಿಸಿದೆ. ಈಗ ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಹಾಗಾಗಿ ಕಷ್ಟಕಾಲದಲ್ಲಿ ನಾವು ನಿಮ್ಮ ಬೆನ್ನಿಗೆ ನಿಂತಂತೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಈಗ ಕಾಂಗ್ರೆಸ್ ಬೆನ್ನಿಗೆ ನಿಲ್ಲಬೇಕು’ ಎಂದು ಮನವಿ ಮಾಡಿದರು.

‘ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ವಾರ್ಷಿಕ ₹24 ಸಾವಿರ ಸಿಗಲಿದೆ. ಮನೆಯ‌ ಯಜಮಾನಿಯರ‌ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಮುಂದಾಗಿದ್ದು, ಬೆಳಗಾವಿ ಜಿಲ್ಲೆಯೊಂದರಲ್ಲಿ ಈ ಯೋಜನೆಯಡಿ ಮಾಸಿಕ ₹212 ಕೋಟಿ ನೀಡಲಾಗುತ್ತಿದೆ’ ಎಂದು ಹೇಳಿದರು.

‘ಚುನಾವಣೆಯಲ್ಲಿ ಭಾಷೆ ನೀಡಿದಂತೆ ನಡೆದುಕೊಂಡಿದ್ದೇವೆ. ನಾವು ಸೇತುವೆಯನ್ನು ಕಟ್ಟಿದ್ದೇವೆ. ಮಂದಿರವನ್ನು ಕಟ್ಟಿದ್ದೇವೆ. ಬಡ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಯೂ ರೂಪಿಸಿದ್ದೇವೆ’ ಎಂದದ ಅವರು, ‘ಕೆಲವರು ₹2,000 ಎಂದರೆ ದೊಡ್ಡ ಮೊತ್ತವೇ ಎಂದು‌ ಕೇಳುತ್ತಿದ್ದಾರೆ. ಆದರೆ, ಬಿಸಿಲಿನಲ್ಲಿ ದಿನವಿಡೀ ಕೆಲಸ ಮಾಡುವ ಮಹಿಳೆಯರಿಗೆ ಕೇಳಿ. ವರ್ಷಕ್ಕೆ ₹24 ಸಾವಿರ ಅವರಿಗೆ ಎಷ್ಟು ಮುಖ್ಯ ಎಂಬುದು ತಿಳಿಯುತ್ತದೆ’ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ‘ಐದೂ ಗ್ಯಾರಂಟಿ ಯೋಜನೆಗಳನ್ನು ಹಂತ–ಹಂತವಾಗಿ ಕಡಿಮೆ ಕಾಲಾವಧಿಯಲ್ಲಿ ಜಾರಿಗೆ ತರಲಾಗಿದೆ’ ಎಂದರು.

ರಾಜ್ಯ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ‘ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಯಶಸ್ವಿಯಾಗಿ ತಲುಪಿಸಲಾಗಿದೆ. ಇವುಗಳ ಅನುಷ್ಠಾನಕ್ಕೆ ಸಂಬಂಧಿಸಿ ಜನಸಾಮಾನ್ಯರಿಂದ ಯಾವುದೇ ತಕರಾರು ಕೂಡ ಬಂದಿಲ್ಲ. ಯೋಜನೆ ಅನುಷ್ಠಾನದಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ’ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿವರ ನೀಡಿದರು. ಅನ್ನಭಾಗ್ಯ ಯೋಜನೆಯ ಡಿಬಿಟಿ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಲಾಯಿತು. ಗೃಹಲಕ್ಷ್ಮಿ ಯೋಜನೆ ಫಲಾನಿಭವಿಗಳಿಗೆ ಚೆಕ್ ವಿತರಿಸಲಾಯಿತು. ಶಾಸಕರಾದ ವಿಶ್ವಾಸ ವೈದ್ಯ, ಬಾಬಾಸಾಹೇಬ ಪಾಟೀಲ, ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ರಾಮಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಪ್ರೊಬೇಷನರಿ ಐಎಎಸ್ ಅಧಿಕಾರಿ ಶುಭಂ ಶುಕ್ಲಾ, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

ಅಂಗನವಾಡಿ ಕೇಂದ್ರದ ಮತ್ತು ಆಶಾ ಕಾರ್ಯಕರ್ತೆಯರ ಸೇವೆ ಗುರುತಿಸಿದ್ದೇವೆ. ನಿಮ್ಮ ಗೌರವಧನ ಹೆಚ್ಚಿಸಿ, ನಾವು ನೀಡಿದ ಭರವಸೆ ಈಡೇರಿಸುತ್ತೇವೆ
-ಲಕ್ಷ್ಮಿ ಹೆಬ್ಬಾಳಕರ, ಸಚಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.