
ಬೆಳಗಾವಿ: ‘ರಾಜ್ಯದಲ್ಲಿ ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚುವುದಿಲ್ಲ ಎನ್ನುವ ರಾಜ್ಯ ಸರ್ಕಾರ, ಕೆಪಿಎಸ್-ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ’ ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟುಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ಜಿಲ್ಲಾ ಘಟಕದ ಸಂಚಾಲಕ ಮಹಾಂತೇಶ ಬಿಳೂರ ಆರೋಪಿಸಿದರು.
ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಒಂದೇ ಸರ್ಕಾರಿ ಶಾಲೆ ಮುಚ್ಚುವುದಿಲ್ಲ ಎನ್ನುತ್ತಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತು ಸತ್ಯಕ್ಕೆ ದೂರವಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯಾವ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿ ಮಾಡಬೇಕು ಮತ್ತು ಅದರಲ್ಲಿ ಯಾವ ಶಾಲೆಗಳನ್ನು ವಿಲೀನಗೊಳಿಸಬೇಕು ಎಂಬ ಪಟ್ಟಿ ಈಗಾಗಲೇ ಸಿದ್ಧವಾಗಿದೆ. ಶಾಲೆಗಳ ಅಭಿವೃದ್ಧಿ ಹೆಸರಿನಲ್ಲಿ ಬಡ ಮಕ್ಕಳ ಶಿಕ್ಷಣ ಕಸಿಯುವ ಹುನ್ನಾರ ಇದಾಗಿದೆ’ ಎಂದು ದೂರಿದರು.
‘ಕೆಪಿಎಸ್‌ಗೆ ನಮ್ಮ ವಿರೋಧವಿಲ್ಲ. ಆದರೆ, ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಸುತ್ತಲಿನ ಶಾಲೆಗಳನ್ನು ಒಂದೇ ಶಾಲೆಯಲ್ಲಿ ವಿಲೀನಗೊಳಿಸುವುದು ಸರಿಯಲ್ಲ. ಸರ್ಕಾರ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು’ ಎಂದು ಒತ್ತಾಯಿಸಿದರು.
ಲಕ್ಕಪ್ಪ ಬಿಜ್ಜನ್ನವರ, ಸ್ಫೂರ್ತಿ ಚಿಕ್ಕಮಠ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.