ಬೆಳಗಾವಿ: ಜೆಡಿಎಸ್ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಗೌಡ ಮತ್ತು ಬೆಂಬಲಿಗರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.
‘ಯಾವುದೇ ಷರತ್ತಿಲ್ಲದೆ ಅವರು ಪಕ್ಷ ಸೇರ್ಪಡೆ ಆಗಿದ್ದಾರೆ. ಅಪೆಕ್ಸ್ ಬ್ಯಾಂಕ್ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಬಹಳ ಕೆಲಸ ಮಾಡಿದ್ದಾರೆ. ಅವರೊಂದಿಗೆ ಶಿವಮೊಗ್ಗ ಎಪಿಎಂಸಿ ಅಧ್ಯಕ್ಷ ದುಗ್ಗಪ್ಪಗೌಡ, ಶಿವಮೊಗ್ಗ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಕೆ.ಜಗದೀಶ್, ಜೆಡಿಎಸ್ ತೀರ್ಥಹಳ್ಳಿ ಬ್ಯಾಕ್ ಅಧ್ಯಕ್ಷ ಸುಂದರೇಶ್ ಸೇರಿದಂತೆ ಹಲವರು ಬಂದಿದ್ದಾರೆ. ಸೋನಿಯಾ, ರಾಹುಲ್ ಗಾಂಧಿ ನಾಯಕತ್ವ ಮತ್ತು ಪಕ್ಷದ ತತ್ವ–ಸಿದ್ಧಾಂತ ಒಪ್ಪಿ ಸೇರಿದ್ದಾರೆ. ಇವರಿಂದಾಗಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಿಲ್ಲೆಯಲ್ಲಿ ಪಕ್ಷಕ್ಕೆ ಬಲ ತುಂಬಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಅಲ್ಲಿನ ಮುಖಂಡ ಮಧು ಬಂಗಾರಪ್ಪ ಅವರು ಕೂಡ ಶೀಘ್ರವೇ ಪಕ್ಷ ಸೇರ್ಪಡೆ ಆಗಲಿದ್ದಾರೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.