ಬೆಳಗಾವಿ: ಆಶಾ, ಅಂಗನವಾಡಿ, ಬಿಸಿಯೂಟ ಮತ್ತು ಇತರೆ ಯೋಜನೆಗಳ ನೌಕರರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು. ಅಲ್ಲಿಯವರೆಗೆ ಕನಿಷ್ಠ ವೇತನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.
ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ನಡೆದ ಈ ಪ್ರತಿಭಟನೆಯಲ್ಲಿ ಆಶಾ, ಅಂಗನವಾಡಿ ಮತ್ತು ಬಿಸಿಯೂಟ ನೌಕರರು ಪಾಲ್ಗೊಂಡಿದ್ದರು.
ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ನಂತರ, ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದರು. ಬಳಿಕ ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
‘ಕಾರ್ಮಿಕ ವಿರೋಧಿಯಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಗುತ್ತಿಗೆ, ಹೊರಗುತ್ತಿಗೆ ಸೇರಿದಂತೆ ಅನೌಪಚಾರಿಕ ವಲಯದ ಎಲ್ಲ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು. ಪ್ರತಿದಿನ 8 ತಾಸಿಗೆ ಮೀರದಂತೆ ಕಾರ್ಮಿಕರ ಕೆಲಸದ ಅವಧಿ ನಿಗದಿಪಡಿಸಬೇಕು’ ಎಂದು ಆಗ್ರಹಿಸಿದರು.
‘ನರೇಗಾ ಯೋಜನೆಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕು. ನಗರ ವ್ಯಾಪ್ತಿಗೂ ಯೋಜನೆಯನ್ನು ವಿಸ್ತರಿಸಬೇಕು’ ಎಂದು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ, ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಮತ್ತಿತರ ಸಂಘಟನೆಯವರು ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.