ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮ‌ ಆರಂಭ, ಹಿಜಾಬ್ ತೆಗೆಯಲು ಪ್ರತ್ಯೇಕ ಕೊಠಡಿ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2022, 5:44 IST
Last Updated 28 ಮಾರ್ಚ್ 2022, 5:44 IST
   

ಬೆಳಗಾವಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಜಿಲ್ಲೆಯಾದ್ಯಂತ ಸೋಮವಾರದಿಂದ ಸುಗಮವಾಗಿ ಆರಂಭವಾಗಿದೆ.

ಕೋವಿಡ್ ಕಾರಣದಿಂದ ಎರಡು ವರ್ಷ ಹಲವು‌ ನಿರ್ಬಂಧ, ಗೊಂದಲಗಳ ನಡುವೆ ಪರೀಕ್ಷೆ ನಡೆದಿತ್ತು. ಈ ಬಾರಿ ಕೋವಿಡ್ ಪ್ರಕರಣಗಳು ಇಳಿಮುಖವಾದ್ದರಿಂದ ಪೂರ್ಣ ಪ್ರಮಾಣದಲ್ಲಿ ಪರೀಕ್ಷೆ ನಡೆಯುತ್ತಿದೆ. ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷಾ ಕೇಂದ್ರಗಳತ್ತ ಬಂದಿದ್ದಾರೆ. ಮೊದಲ ದಿನವಾದ ಸೋಮವಾರ ಪ್ರಥಮ ಭಾಷೆ ವಿಷಯದ ಪರೀಕ್ಷೆ ನಡೆಯುತ್ತಿದೆ.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 33,807 ಹಾಗೂ ಚಿಕ್ಕೋಡಿ ಶೈಕ್ಷಣಿಕ ‌ಜಿಲ್ಲೆಯಲ್ಲಿ 44,780 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಕ್ರಮವಾಗಿ 139 ಹಾಗೂ 157 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ‌ಬಳಿ ಹಿಂದೆಂದಿಗಿಂತಲೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ನಿಗಾ ವಹಿಸಲಾಗಿದೆ.

ADVERTISEMENT

ನಗರದ ಸರ್ದಾರ್ ಪ್ರೌಢಶಾಲೆಯಲ್ಲಿ ಉರ್ದು ಮಾಧ್ಯಮದ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದರು.‌ ಪ್ರತ್ಯೇಕ ಕೊಠಡಿಗೆ ಅವರನ್ನು ಕಳುಹಿಸಿ, ಅಲ್ಲಿ ಸರ್ಕಾರದ ಸೂಚನೆಯಂತೆ ಹಿಜಾಬ್ ತೆಗೆಸಿದ ಬಳಿಕ ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ಈ‌ ವಿಷಯದಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ.

ಇಲಾಖೆಯಿಂದ ನೀಡಿರುವ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದೆ.

ಕೇಂದ್ರಕ್ಕೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ ಬೆನಕೆ ಭೇಟಿ ನೀಡಿದರು. ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಶುಭ ಕೋರಿದರು. ಅವರೊಂದಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹಾಗೂ‌ ‌ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.