ADVERTISEMENT

ಯುವಜನರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಸಂಸದೆ ಮಂಗಲಾ ಅಂಗಡಿ ಸಲಹೆ

ಕೆಎಲ್‌ಇ ಆಸ್ಪತ್ರೆ: 18 ಮೇಲಿನವರಿಗೆ ಲಸಿಕೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 12:20 IST
Last Updated 11 ಜೂನ್ 2021, 12:20 IST
ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ 18 ವರ್ಷ ಮೇಲಿನವರಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನವನ್ನು ಸಂಸದೆ ಮಂಗಲಾ ಸುರೇಶ ಅಂಗಡಿ ಶುಕ್ರವಾರ ಉದ್ಘಾಟಿಸಿದರು
ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ 18 ವರ್ಷ ಮೇಲಿನವರಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನವನ್ನು ಸಂಸದೆ ಮಂಗಲಾ ಸುರೇಶ ಅಂಗಡಿ ಶುಕ್ರವಾರ ಉದ್ಘಾಟಿಸಿದರು   

ಬೆಳಗಾವಿ: ‘ಸಧೃಡ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಅತ್ಯಂತ ಮುಖ್ಯವಾಗಿದೆ. ಕೋವಿಡ್ ಎದುರಿಸಲು ಲಸಿಕೆ (ಚುಚ್ಚುಮದ್ದು) ಪ್ರಬಲ ಅಸ್ತ್ರವಾಗಿದ್ದು, ಯಾವುದೇ ಹಿಂಜರಿಕೆ ಇಲ್ಲದೇ ಪಡೆದುಕೊಳ್ಳಬೇಕು’ ಎಂದು ಸಂಸದೆ ಮಂಗಲಾ ಅಂಗಡಿ ಹೇಳಿದರು.

ಕೆಎಲ್‌ಇ ಸಂಸ್ಥೆಯ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ 2ನೇ ಅಲೆಯ ರೂಪದಲ್ಲಿ ಬಂದೆರಗಿದೆ. ಅದನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರವು ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಂಡಿದೆ. ಈಗ ನಿಯಂತ್ರಣಕ್ಕೆ ಬರುತ್ತಿದ್ದರೂ ಅದರಿಂದ ರಕ್ಷಣೆ ಪಡೆಯಲು ಲಸಿಕೆ ಹಾಕಿಸಿಕೊಳ್ಳಬೇಕು’ ಎಂದರು.

ADVERTISEMENT

ಸಂಸ್ಥೆಯ ನಿರ್ದೇಶಕರೂ ಆಗಿರುವ ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ‘ಸಾಂಕ್ರಾಮಿಕದ ತುರ್ತು ಸಂದರ್ಭದಲ್ಲಿ ಪ್ರಭಾಕರ ಕೋರೆ ಆಸ್ಪತ್ರೆ ಈ ಭಾಗದ ಜನರಿಗೆ ಸಕಲ ಆರೋಗ್ಯ ಸೇವೆ ನೀಡುತ್ತಿದೆ. ಗರ್ಭಿಣಿ ಮತ್ತು ಮಕ್ಕಳ ಆರೈಕೆಗಾಗಿ 40 ಹಾಸಿಗೆಗಳನ್ನು ಮೀಸಲಿಡಲಾಗಿದೆ’ ಎಂದು ತಿಳಿಸಿದರು.

‘ಚಿಕ್ಕೋಡಿ ಹಾಗೂ ಗೋಕಾಕ ಭಾಗದ ಜನರಿಗೆ ಲಸಿಕೆ ನೀಡಿಕೆ ಚುರುಕುಗೊಳ್ಳಬೇಕು. ಅದಕ್ಕೆ ಸಕಲ ವ್ಯವಸ್ಥೆಯನ್ನು ಮಾಡುವಂತೆ ಜಿಲ್ಲಾಡಳಿತ ಹಾಗೂ ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ. ಲಸಿಕೆ ಹಾಕಿಸಿಕೊಂಡರೆ ಅಪಾಯದಿಂದ ಪಾರಾಗಬಹುದು ಎಂದು ಅನೇಕ ಅಧ್ಯಯನಗಳು ತಿಳಿಸಿವೆ. ಅದರಲ್ಲೂ ಮುಖ್ಯವಾಗಿ ಯುವ ಸಮುದಾಯ ಹಿಂಜರಿಯಬಾರದು’ ಎಂದರು.

ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ವಿ. ಜಾಲಿ, ‘ಕೋವಿಡ್ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆಯು ಆಸ್ಪತ್ರೆಯಲ್ಲಿದೆ. ಸೋಂಕಿಗೆ ಒಳಗಾದ ಗರ್ಭಿಣಿಯರ ಆರೈಕೆಗಾಗಿ 20 ಹಾಸಿಗೆಗಳ ಪ್ರತ್ಯೇಕ ವಾರ್ಡ್‌ ಹಾಗೂ ಲೇಬರ್‌ ರೂಂ ಪ್ರಾರಂಭಿಸಲಾಗಿದೆ’ ಎಂದು ತಿಳಿಸಿದರು.

‘ಸಂಭವನೀಯ 3ನೇ ಅಲೆಯ ಸಂದರ್ಭದಲ್ಲಿ ಸೋಂಕಿನಿಂದ ಮಕ್ಕಳು ಬಳಲಿದ್ದಾರೆ ಎಂದು ಅಂದಾಜಿಸಲಾಗಿದೆ. ಚಿಕಿತ್ಸೆಯಲ್ಲಿ ಯಾವುದೇ ತೊಂದರೆ ಉಂಟಾಗಬಾರದೆಂದು ತಜ್ಞ ವೈದ್ಯರನ್ನು ಸಜ್ಜುಗೊಳಿಸಲಾಗಿದೆ. ವೆಂಟಿಲೇಟರ್ ಸಹಿತಿ 20 ಐಸಿಯು ಹಾಸಿಗೆಗಳ ಪ್ರತ್ಯೇಕ ವಾರ್ಡ್‌ ಪ್ರಾರಂಭಿಸಲಾಗಿದೆ’ ಎಂದು ಹೇಳಿದರು.

ಯುಎಸ್‌ಎಂ–ಕೆಎಲ್‌ಇ ನಿರ್ದೇಶಕ ಡಾ.ಎಚ್.ಬಿ. ರಾಜಶೇಖರ, ಡಾ.ವಿ.ಎಸ್. ಸಾಧುನವರ, ಕೆಎಲ್‌ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ ಕುಲಪತಿ ಡಾ.ವಿವೇಕ ಸಾವೋಜಿ, ಕುಲಸಚಿವ ಡಾ.ವಿ.ಎ. ಕೋಠಿವಾಲೆ, ಡಾ.ಬಸವರಾಜ ಬಿಜ್ಜರಗಿ, ಡಾ.ರಾಜಶೇಖರ ಸೋಮನಟ್ಟಿ ಉಪಸ್ಥಿರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.