ADVERTISEMENT

ಜಂತುಹುಳು ನಿವಾರಣಾ ಮಾತ್ರೆ ಸೇವಿಸಲು ಸಲಹೆ

ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಚಾಲನೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 14:35 IST
Last Updated 10 ಫೆಬ್ರುವರಿ 2020, 14:35 IST
ಹಾಲಬಾವಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸೋಮವಾರ ನಡೆದ ಜಂತುಹುಳು ನಿವಾರಣೆ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಅರುಣ ಕಟಾಂಬಳೆ ಮಕ್ಕಳೊಂದಿಗೆ ಉದ್ಘಾಟಿಸಿದರು
ಹಾಲಬಾವಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸೋಮವಾರ ನಡೆದ ಜಂತುಹುಳು ನಿವಾರಣೆ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಅರುಣ ಕಟಾಂಬಳೆ ಮಕ್ಕಳೊಂದಿಗೆ ಉದ್ಘಾಟಿಸಿದರು   

ಬೆಳಗಾವಿ: ‘1ರಿಂದ 19 ವರ್ಷದೊಳಗಿನ ಎಲ್ಲರಿಗೂ ಸರ್ಕಾರದಿಂದ ಜಂತುಹುಳು ನಿವಾರಣಾ ಮಾತ್ರೆಗಳನ್ನು ನೀಡಲಾಗುತ್ತಿದೆ. ಅವುಗಳನ್ನು ತಪ್ಪದೆ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಅರುಣ ಕಟಾಂಬಳೆ ತಿಳಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ, ಸಮಾಜಕಲ್ಯಾಣ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾಂತರ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಿಂದ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಹಾಲಬಾವಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಬಳಸಿಕೊಂಡು ಜೀವನದಲ್ಲಿ ಮುಂದೆ ಬರಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ದು ಸುಣಗಾರ ಮಾತನಾಡಿ, ‘ಮಕ್ಕಳಿಗೆ ನಿಯಮಿತವಾಗಿ ಲಸಿಕೆಗಳನ್ನು ಹಾಕಿಸಬೇಕು. 1ರಿಂದ 19 ವರ್ಷದೊಳಗಿನವರಿಗೆ ವರ್ಷದಲ್ಲಿ ಎರಡು ಬಾರಿ ಜಂತುಹುಳು ನಿವಾರಣಾ ಮಾತ್ರೆಗಳನ್ನು ವಿತರಿಸಬೇಕು. ಇದರಿಂದ ಅವರ ಆರೋಗ್ಯ ಕಾಪಾಡಿಕೊಳ್ಳಬಹುದು’ ಎಂದು ತಿಳಿಸಿದರು.

ಡಿಎಚ್‌ಒ ಡಾ.ಶಶಿಕಾಂತ ಮುನ್ಯಾಳ, ‘ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಮಾತ್ರೆ ನೀಡಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಕ್ಕಳನ್ನು ಜಂತು ಹುಳು ಬಾಧೆಯಿಂದ ಸಂರಕ್ಷಿಸುವುದರಿಂದ ಅಪೌಷ್ಟಿಕತೆ, ರಕ್ತಹೀನತೆ, ಕುಂಠಿತ ಬೆಳವಣಿಗೆ ತಡೆಗಟ್ಟಬಹುದು. ಮಕ್ಕಳು ಶಾಲೆಗಳಿಗೆ ನಿಯಮಿತವಾಗಿ ಹಾಜರಾಗುವಂತೆ ನೋಡಿಕೊಳ್ಳಬಹುದು’ ಎಂದು ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ವಂಟಮುರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಕಪ್ಪಾ ಪಕಾಲಿ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಸದಸ್ಯೆ ನಸರಿನ್ ಬಾನು, ವಂಟಮುರಿ ಗ್ರಾಮ ಪಂಚಾಯಿತಿ ಸದಸ್ಯೆ ಮಹಾದೇವಿ ಚೌಗಲಾ, ಡಿಡಿಪಿಐ ಎ.ಬಿ. ಪುಂಡಲಿಕ, ಜಿಲ್ಲಾ ಪಂಚಾಯಿತಿ ಅಕ್ಷರ ದಾಸೋಹ ಯೋಜನೆ ಇಒ ಬಿ.ಎಚ್. ಮಿಲ್ಲಾನಟ್ಟಿ, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾ ಅಧಿಕಾರಿ ಎಫ್‌.ಸಿ. ನದಾಫ, ಗ್ರಾಮೀಣ ಬಿಇಒ ಆರ್.ಪಿ. ಜುಟ್ಟನ್ನವರ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಆರ್.ಸಿ. ಮುದಕನಗೌಡರ, ಗ್ರಾಮೀಣ ಸಿಡಿಪಿಒ ರೇವತಿ ಹೊಸಮಠ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ ಡುಮ್ಮಗೋಳ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ ದಶರಥ ಆರೇರ, ವಂಟಮುರಿ ವೈದ್ಯಾಧಿಕಾರಿ ಡಾ.ಅಭಿನಂದ ವಾಲಿ ಇದ್ದರು.

ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಪಿ. ಯಲಿಗಾರ ಸ್ವಾಗತಸಿದರು. ಸಿ.ಜಿ. ಅಗ್ನಿಹೋತ್ರಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.