ADVERTISEMENT

ಕಳ್ಳಭಟ್ಟಿ ದಂಧೆ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲು ಲಕ್ಷ್ಮೀ ಸೂಚನೆ

ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸೂಚನೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2020, 11:14 IST
Last Updated 2 ಏಪ್ರಿಲ್ 2020, 11:14 IST
ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿದರು
ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿದರು   

ಬೆಳಗಾವಿ: ‌‘ಲಾಕ್‍ಡೌನ್ ಹಿನ್ನೆಲೆಯಲ್ಲಿ ಮದ್ಯದಂಗಡಿ ಬಂದ್ ಆಗಿರುವುದರಿಂದ ಕಳ್ಳಭಟ್ಟಿ ಹಾವಳಿ ಹೆಚ್ಚಾಗಿದೆ. ₹10ಕ್ಕೆ ಸಿಗುತ್ತಿದ್ದ ಪ್ಯಾಕೆಟ್ ಈಗ ₹ 30ಕ್ಕೆ ಮಾರಾಟವಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಇಂತಹ ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಮತ್ತು ಕಳ್ಳಭಟ್ಟಿ ದಂಧೆ ನಡೆಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸೂಚಿಸಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿಯಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಹೊರ ದೇಶ ಹಾಗೂ ರಾಜ್ಯಗಳಿಂದ ಗ್ರಾಮೀಣ ಕ್ಷೇತ್ರಕ್ಕೆ 3,800 ಜನರು ಬಂದಿದ್ದಾರೆ. ಇವರ ಮೇಲೆ ನಿಗಾ ಇಡಲು ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯಿತಿಗಳಿಂದ ಕಾರ್ಯಪಡೆ ರಚಿಸಲಾಗಿದೆ. ಎಲ್ಲರೂ ಹೋಂ ಕ್ವಾರಂಟೈನ್‌ನಲ್ಲಿ ಇದ್ದಾರೆಯೋ ಇಲ್ಲವೋ ಎಂಬುದರ ಕುರಿತು ತೀವ್ರ ನಿಗಾ ವಹಿಸಬೇಕು’ ಎಂದು ತಿಳಿಸಿದರು.

ADVERTISEMENT

‘ಜಿಲ್ಲೆಯಲ್ಲಿ ದೇವರ ಆಶೀರ್ವಾದದಿಂದ ಕೊರೊನಾ ಪಾಸಿಟಿವ್ ಪತ್ತೆಯಾಗಿಲ್ಲ. ಜನತೆ ಯಾವಾಗಲೂ ಸ್ವಚ್ಛತೆ ಕಾಪಾಡಿಕೊಂಡು ಸುರಕ್ಷಿತವಾಗಿರಬೇಕು. ಕೊರೊನಾ ವೈರಸ್ ವಿರುದ್ಧ ನಡೆಯುತ್ತಿರುವ ಸಮರದಲ್ಲಿ ಕುಟುಂಬ ಸೇರಿದಂತೆ ಯಾವುದೆ ಚಿಂತೆ ಮಾಡದೆ ಸರ್ಕಾರದ ಕೆಲಸ ದೇವರ ಕೆಲಸ ಎಂದುಕೊಂಡು ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಕಾರ್ಯ ಶ್ಲಾಘನೀಯ’ ಎಂದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಂಕರಗೌಡ ಪಾಟೀಲ, ತಾಲ್ಲೂಕು ಕಾರ್ಯಪಡೆ ಅಧ್ಯಕ್ಷ ಪ್ರೀತಂ ನಸಲಾಪುರೆ, ಇಒ ಮಲ್ಲಿಕಾರ್ಜುನ ಕಲಾದಗಿ, ತಹಶೀಲ್ದಾರ್ ಆರ್.ಕೆ. ಕುಲಕರ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.