ADVERTISEMENT

ಸಚಿವರಿಂದ ‘ನಗರ ಪ್ರದಕ್ಷಿಣೆ’: ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಬಸವರಾಜ್

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 13:20 IST
Last Updated 7 ಜನವರಿ 2021, 13:20 IST
ಬೆಳಗಾವಿಯಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಗುರುವಾರ ಪರಿಶೀಲಿಸಿದರುಪ್ರಜಾವಾಣಿ ಚಿತ್ರ
ಬೆಳಗಾವಿಯಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಗುರುವಾರ ಪರಿಶೀಲಿಸಿದರುಪ್ರಜಾವಾಣಿ ಚಿತ್ರ   

ಬೆಳಗಾವಿ: ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ಗುರುವಾರ ನಗರದಲ್ಲಿ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಗುಣಮಟ್ಟ ಕಾಯ್ದುಕೊಳ್ಳಬೇಕು. ಈ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಎಪಿಎಂಸಿ ರಸ್ತೆಯಲ್ಲಿರುವ ಮಹಾನಗರ ಪಾಲಿಕೆಯ ವಾಣಿಜ್ಯ ಕಟ್ಟಡಗಳ ಕಾಮಗಾರಿ ಪರಿಶೀಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಎರಡು ತಿಂಗಳುಗಳಲ್ಲಿ ವಾಣಿಜ್ಯ ಮಳಿಗೆಗಳ ಕಾಮಗಾರಿಗಳು ಸಂಪೂರ್ಣಗೊಳ್ಳಲಿವೆ. ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಮಳೆಗೆಗಳನ್ನು ಹಂಚಿಕೆ ಮಾಡಲಾಗುವುದು’ ಎಂದು ತಿಳಿಸಿದರು.

‘ನಗರದಲ್ಲಿರುವ ಪೌರಕಾರ್ಮಿಕರಿಗೆ ಉಚಿತವಾಗಿ ಮನೆಗಳನ್ನು ನೀಡಲಾಗುವುದು. ಮೊದಲನೇ ಹಂತದಲ್ಲಿ 48 ಮನೆಗಳ ನಿರ್ಮಾಣ ಕಾರ್ಯ ನಡೆದಿದೆ. 2ನೇ ಹಂತದಲ್ಲಿ 158 ಮನೆಗಳನ್ನು ನಿರ್ಮಿಸಲಾಗುವುದು. ಅದಕ್ಕೆ ಟೆಂಡರ್ ಕೂಡ ಕರೆಯಲಾಗಿದೆ. ಕೆಲವೇ ದಿನಗಳಲ್ಲಿ ಆ ಕಾಮಗಾರಿಗಳನ್ನು ಆರಂಭಿಸಲಾಗುವುದು’ ಎಂದರು.

ADVERTISEMENT

‘ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕೂಡ ವೀಕ್ಷಿಸಿದ್ದೇನೆ. ಸಾರ್ವಜನಿಕರ ದೂರುಗಳ ಆಧಾರದ ಮೇಲೆ ಎಲ್ಲೆಲ್ಲಿ ಸಮಸ್ಯೆಗಳಾಗಿವೆಯೋ ಅವುಗಳೆಲ್ಲವನ್ನೂ ವೀಕ್ಷಿಸಿ ಸಮಾಲೋಚನೆ ನಡೆಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಈಗಾಗಲೇ ಆರಂಭಿಸಲಾಗಿರುವ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದ್ದೇನೆ’ ಎಂದು ತಿಳಿಸಿದರು.

‘ನಗರಕ್ಕೆ ಮುಖ್ಯಮಂತ್ರಿ ₹ 125 ಕೋಟಿ ಅನುದಾನ ಕೊಟ್ಟಿದ್ದಾರೆ. ಅದರಲ್ಲಿ ರಸ್ತೆಗಳ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ಶುಕ್ರವಾರ ಸ್ಮಾರ್ಟ್‌ ಸಿಟಿ ಯೋಜನೆ ಸೇರಿದಂತೆ ನಗರದಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳ ಪ್ರತಿ ಪರಿಶೀಲಿಸುತ್ತೇನೆ. ಕಾಮಗಾರಿಗಳಲ್ಲಿ ಪ್ರಗತಿ ಕಂಡುಬಂದಿದೆ. ಸ್ಮಾರ್ಟ್‌ ಸಿಟಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ’ ಎಂದರು.

‘ಕೆಲವೇ ದಿನಗಳಲ್ಲಿ ವಿಶ್ವ ಬ್ಯಾಂಕ್ ನೆರವಿನಿಂದ ₹ 800 ಕೋಟಿ ವೆಚ್ಚದಲ್ಲಿ ಬೆಳಗಾವಿ, ಹುಬ್ಬಳ್ಳಿ–ಧಾರವಾಡ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ 24x7 ಕುಡಿಯುವ ನೀರಿನ ಕಾಮಗಾರಿಗಳಿಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವುದು. ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಸಮಸ್ಯೆ ಇದ್ದಲ್ಲಿ, ಬಗೆಹರಿಸುವ ಕೆಲಸ ಮಾಡಲಾಗುವುದು’ ಎಂದು ಹೇಳಿದರು.

ಪೌರಕಾರ್ಮಿಕರ ವಸತಿಸಂಕೀರ್ಣ, ತ್ಯಾಜ್ಯ ನೀರು ಸಂಸ್ಕರಣಾ ಘಟಕ, ಬಹುಪಯೋಗಿ ಕಟ್ಟಡ ಮತ್ತಿತರ ಕಾಮಗಾರಿಗಳ ಕಾಮಗಾರಿಯನ್ನು ಅವರು ಪರಿಶೀಲಿಸಿದರು.

ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.