ADVERTISEMENT

ಬಲ ಪ್ರಯೋಗಿಸಿಯಾದರೂ ಪ್ರತಿಯೊಬ್ಬರ ಪರೀಕ್ಷೆ ನಡೆಸಿ: ಸಚಿವ ಜಗದೀಶ್ ಶೆಟ್ಟರ್

ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಭೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2020, 10:58 IST
Last Updated 13 ಏಪ್ರಿಲ್ 2020, 10:58 IST
ಬೆಳಗಾವಿಯಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್‌ ಶೆಟ್ಟರ್‌ ಕೋವಿಡ್‌–19 ನಿಯಂತ್ರಣ ಕುರಿತು ಸಭೆ ನಡೆಸಿದರು. ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು
ಬೆಳಗಾವಿಯಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್‌ ಶೆಟ್ಟರ್‌ ಕೋವಿಡ್‌–19 ನಿಯಂತ್ರಣ ಕುರಿತು ಸಭೆ ನಡೆಸಿದರು. ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು   

ಬೆಳಗಾವಿ: ನವದೆಹಲಿಯ ತಬ್ಲೀಗ್‌ ಜಮಾತ್‌ ಸಭೆಯಲ್ಲಿ ಭಾಗವಹಿಸಿ ವಾಪಸ್ಸಾಗಿರುವ ಹಾಗೂ ಅವರ ಜೊತೆ ನಿಕಟ ಸಂಪರ್ಕದಲ್ಲಿರುವ ಪ್ರತಿಯೊಬ್ಬರ ವೈದ್ಯಕೀಯ ತಪಾಸಣೆ ಮಾಡಬೇಕು. ಒಂದು ವೇಳೆ ಸಹಕರಿಸದಿದ್ದರೆ ಕಾನೂನು ಬಲಪ್ರಯೋಗಿಸಿ ಮಾಡಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್‌ ಶೆಟ್ಟರ್‌ ಜಿಲ್ಲಾಡಳಿತಕ್ಕೆ ಖಡಕ್‌ ಸೂಚನೆ ನೀಡಿದರು.

ಕೋವಿಡ್-19 ನಿಯಂತ್ರಣ ಕುರಿತು ಇಲ್ಲಿನ ಪ್ರವಾಸಿಮಂದಿರದಲ್ಲಿ ಸೋಮವಾರ ನಡೆದ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕುಡಚಿ ಹಾಗೂ ರಾಯಬಾಗದ ಕೆಲವು ವ್ಯಕ್ತಿಗಳು ನವದೆಹಲಿಯ ತಬ್ಲೀಗ್‌ ಜಮಾತ್‌ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ, ವಾಪಸ್ಸಾಗಿದ್ದಾರೆ. ಅಂತಹವರಲ್ಲಿ ಹಾಗೂ ಅವರ ಜೊತೆ ನಿಕಟ ಸಂಪರ್ಕ ಹೊಂದಿದವರಲ್ಲಿ ಕೋವಿಡ್‌– 19 ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶದ ಪ್ರತಿಯೊಬ್ಬರನ್ನೂ ಪರೀಕ್ಷೆಗೆ ಒಳಪಡಿಸಬೇಕು’ ಎಂದು ತಿಳಿಸಿದರು.

ADVERTISEMENT

ಶೀಘ್ರ ಪ್ರಯೋಗಾಲಯ:

‘ಈಗಾಗಲೇ ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿ ಅವರ ಜತೆ ಚರ್ಚೆ ನಡೆಸಲಾಗಿದ್ದು, ಬೆಳಗಾವಿಯಲ್ಲಿ ಇನ್ನೆರಡು ದಿನಗಳಲ್ಲಿ ಕೊರೊನಾ ಸೋಂಕು ಪತ್ತೆ ಹಚ್ಚುವ ಪ್ರಯೋಗಾಲಯ ಆರಂಭಿಸಲಾಗುವುದು’ ಎಂದು ತಿಳಿಸಿದರು.

ಬಿಗಿ ಕ್ರಮಕ್ಕೆ ಸೂಚನೆ:‘ನಿಷೇಧಿತ ಪ್ರದೇಶಗಳಾಗಿ ಘೋಷಿಸಲಾಗಿರುವ ಹಿರೇಬಾಗೇವಾಡಿ, ಕುಡಚಿ, ಬೆಳಗುಂದಿ ಹಾಗೂ ಬೆಳಗಾವಿ ಕ್ಯಾಂಪ್ ಪ್ರದೇಶಗಳಲ್ಲಿ ಅಗತ್ಯ ವಸ್ತುಗಳು ಮತ್ತು ವೈದ್ಯಕೀಯ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳಬೇಕು’ ಎಂದರು.

ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ ಅಂಗಡಿ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ ಮಾಮನಿ ಮಾತನಾಡಿ, ಸೋಂಕು ತಡೆಗಟ್ಟಲು ಸಾಧ್ಯವಾದಷ್ಟು ಬಿಗಿ ಕ್ರಮಕ್ಕೆ ಸಲಹೆ ನೀಡಿದರು.

ಪ್ರತಿಯೊಬ್ಬರ ಕ್ವಾರಂಟೈನ್ ಗೆ ಸಲಹೆ:ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಮಾತನಾಡಿ, ‘ಕುಡಚಿಯ ಪ್ರತಿಯೊಬ್ಬರನ್ನು ಕಡ್ಡಾಯವಾಗಿ ಕ್ವಾರಂಟೈನ್‌ದಲ್ಲಿ ಇರಿಸದಿದ್ದರೆ ಮುಂದೆ ಇನ್ನಷ್ಟು ಜನರಿಗೆ ವ್ಯಾಪಿಸುವ ಅಪಾಯವಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ರಾಜ್ಯಸಭಾ ಸದಸ್ಯರಾದ ಡಾ.ಪ್ರಭಾಕರ್ ಕೋರೆ, ‘ತುರ್ತು ಚಿಕಿತ್ಸೆಗೆ ಅಗತ್ಯವಿರುವ ರೋಗಿಗಳನ್ನು ಸಾಗಿಸುವ ವಾಹನಗಳಿಗೆ ಅಂತರ್ ಜಿಲ್ಲಾ ಗಡಿಯಲ್ಲಿ ಯಾವುದೇ ಕಾರಣಕ್ಕೂ ತಡೆಯೊಡ್ಡಬಾರದು’ ಎಂದು ಕೋರಿದರು.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಶಾಸಕ ಅನಿಲ ಬೆನಕೆ ಮಾತನಾಡಿದರು.

ಆಸ್ಪತ್ರೆಗೆ ಸ್ಥಳಾಂತರ:‘ಕುಡಚಿಯಿಂದ ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವುದರಿಂದ ನಿಷೇಧಿತ ಪ್ರದೇಶ (ಕಂಟೈನ್ಮೆಂಟ್ ಝೋನ್) ಎಂದು ಈಗಾಗಲೇ ಘೋಷಿಸಲಾಗಿದೆ. ದಿನಸಿ, ತರಕಾರಿ ಮತ್ತು ವೈದ್ಯಕೀಯ ಸೌಲಭ್ಯ ಹೊರತುಪಡಿಸಿ ಯಾವುದಕ್ಕೂ ಅವಕಾಶ ನೀಡಿಲ್ಲ’ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದರು.

‘ಕುಡಚಿಯಲ್ಲಿ ಈಗಾಗಲೇ ಮನೆ ಮನೆಗೆ ತೆರಳಿ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಶೇ 80ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ’ ಎಂದು ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ವಿವರಿಸಿದರು.

‘ಬೆಳಗುಂದಿ ಮತ್ತು ಹಿರೇಬಾಗೇವಾಡಿ ಕಂಟೈನ್ಮೆಂಟ್ ಝೋನ್‌ಗಳಲ್ಲಿ ನಿರಂತರ ಪರಿಶೀಲನೆ ನಡೆದಿದೆ. ಸಿಸಿಟಿವಿ ಅಳವಡಿಸಿ ಜನಸಂಚಾರದ ಮೇಲೆ ನಿಗಾ ವಹಿಸಲಾಗಿದೆ’ ಎಂದು ಉಪ ವಿಭಾಗಾಧಿಕಾರಿಗಳಾದ ಅಶೋಕ ತೇಲಿ ತಿಳಿಸಿದರು.

ಕ್ಯಾಂಪ್ ಪ್ರದೇಶದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಅಲ್ಲಿನ ನೋಡಲ್ ಅಧಿಕಾರಿಯಾಗಿರುವ ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ‌.ಎಚ್. ವಿವರಿಸಿದರು.

ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.