ಬೆಳಗಾವಿ: ‘ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ 7ರಂದು ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಕಾರ್ಯಕ್ರಮಕ್ಕೆ ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸಂಗೊಳ್ಳಿ ರಾಯಣ್ಣನೊಂದಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಮರಣ ದಂಡನೆ ಹಾಗೂ ಜೀವಾವಧಿ ಶಿಕ್ಷೆಗೆ ಒಳಗಾದ ಸಮುದಾಯದ ನಾಯಕ ಹೆಸರುಗಳನ್ನು ಕಾರ್ಯಕ್ರಮದ ವೇದಿಕೆಗೆ ಇಡಬೇಕು’ ಎಂದು ಸೂಚಿಸಿದರು.
ಕಾರ್ಯಕ್ರಮದ ದಿನದಂದು ಕೋಟೆ ಕೆರೆ ಆವರಣದಿಂದ ಸಂಗೋಳ್ಳಿ ರಾಯಣ್ಣ ಮಾರ್ಗವಾಗಿ ಕುಮಾರ ಗಂಧರ್ವ ರಂಗಮಂದಿರದ ವರೆಗೆ ಭವ್ಯ ಮೆರವಣಿಗೆ ಆಯೋಜಿಸಲು ತೀರ್ಮಾನಿಸಲಾಯಿತು.
ಮೆರವಣಿಗೆಯಲ್ಲಿ ಜಾನಪದ ಕಲಾ ತಂಡ ಹಾಗೂ ಮಹಿಳೆಯರಿಂದ ಕುಂಭ ಮೆರವಣಿಗೆ ಆಯೋಜಿಸಲು ಕ್ರಮ ಜರುಗಿಸಬೇಕು. ವೇದಿಕೆ ಕಾರ್ಯಕ್ರಮ ಹಾಗೂ ಮೆರವಣಿಗೆಯಲ್ಲಿ ಎಲ್ಲ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸುವಂತೆ ಕ್ರಮ ವಹಿಸಲು ಸೂಚಿಸಿದ ಅವರು, ನಗರದ ಪ್ರವೇಶ ಸ್ಥಳಗಳಲ್ಲಿ ಸ್ವಾಗತ ಕಮಾನು ನಿರ್ಮಾಣ ಹಾಗೂ ಪ್ರಮುಖ ಸ್ಥಳಗಳಲ್ಲಿ ಬ್ಯಾನರ್ ಅಳವಡಿಸಲು ತಿಳಿಸಿದರು.
ಆಮಂತ್ರಣ ಪತ್ರಿಕೆಗಳನ್ನು ಶಿಚ್ಟಾಚಾರದ ಪ್ರಕಾರ ಮುದ್ರಿಸಿ ಗಣ್ಯರಿಗೆ ಸಾಕಷ್ಟು ಮುಂಚಿತವಾಗಿ ತಲುಪಿಸುವ ಕಾರ್ಯವಾಗಬೇಕು. ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಅವರ ಜೀವನ ಸಂದೇಶಗಳನ್ನು ಜನ ಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳನ್ನು ಅಂತಿಮಗೊಳಿಸಲು ಸೂಚಿಸಿದರು.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಸೇರಿದಂತೆ ಸರ್ಕಾರಿ ಕಚೇರಿ, ಬ್ಯಾಂಕುಗಳಲ್ಲಿ ಕಡ್ಡಾಯವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಆಚರಿಸಿ ವರದಿ ಸಲ್ಲಿಸಲು ಸೂಚನೆ ನೀಡಲಾಗುವುದು ಎಂದರು.
ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿ ಸನ್ಮಾನಿಸಲು ತೀರ್ಮಾನಿಸಲಾಯಿತು. ತಾಲ್ಲೂಕುಗಳಲ್ಲಿ ತಹಶೀಲ್ದಾರರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ನಿರ್ದೇಶನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ‘ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಉದ್ಯೋಗ ಮೇಳ ಆಯೋಜಿಸಲು ಕ್ರಮವಹಿಸಲಾಗುವುದು’ ಎಂದರು.
ನಗರ ಪೊಲೀಸ್ ಆಯುಕ್ತ ಬೊರಸೆ ಗುಲಾಬರಾವ್ ಭೂಷಣ, ಮಹಾನಗರ ಪಾಲಿಕೆ ಆಯುಕ್ತೆ ಶುಭಾ ಬಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುದಾಯದ ಮುಖಂಡರು, ಗಣ್ಯರು ಚರ್ಚೆಯಲ್ಲಿ ಪಾಲ್ಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.