ADVERTISEMENT

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ದಿನಗೂಲಿ ನೌಕರರರಿಂದ ಬೃಹತ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2019, 14:05 IST
Last Updated 20 ಜೂನ್ 2019, 14:05 IST
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳದ ಸದಸ್ಯರು ಬೆಳಗಾವಿಯಲ್ಲಿ ಗುರುವಾರ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳದ ಸದಸ್ಯರು ಬೆಳಗಾವಿಯಲ್ಲಿ ಗುರುವಾರ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು   

ಬೆಳಗಾವಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳದ ಸದಸ್ಯರು ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.

ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಸದಸ್ಯರು, ನೌಕರರ ವಿವಿಧ 34 ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಇದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತವಾಯಿತು.

ಮಹಾಮಂಡಳದ ಸಂಸ್ಥಾಪಕ ಕೆ.ಎಸ್‌. ಶರ್ಮಾ ಮಾತನಾಡಿ, ‘ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ತೆಗೆಯಬಾರದು. ಒಂದು ವೇಳೆ ಯಾರನ್ನಾದರೂ ಕೆಲಸದಿಂದ ತೆಗೆದಿದ್ದರೆ ಮರು ನೇಮಕ ಮಾಡಿಕೊಳ್ಳಬೇಕು. ಬೇರೆ ರಾಜ್ಯಗಳಲ್ಲಿ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಿರುವ ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿಯೂ ಖಾಯಂಗೊಳಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಈ ಬಗ್ಗೆ ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದರೂ ಕೂಡ ಸರ್ಕಾರ ಸ್ಪಂದಿಸುತ್ತಿಲ್ಲ. ಕೂಡಲೇ, ಈ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೇ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಬೃಹತ್‌ ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ವೇತನ ಪರಿಷ್ಕರಿಸಿ:ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಕಾತರಕಿ ಮಾತನಾಡಿ, ‘6ನೇ ವೇತನ ಆಯೋಗದಂತೆ ಅರ್ಹ ದಿನಗೂಲಿ ನೌಕರರಿಗೆ 2018ರ ಎಪ್ರಿಲ್‌ 1ರಿಂದಲೇ ಅನ್ವಯವಾಗುವಂತೆ ವೇತನ ಜಾರಿಗೊಳಿಸಬೇಕು. ಶೇ.100ರಷ್ಟು ತುಟ್ಟಿ ಭತ್ತೆ ಹಾಗೂ ಮನೆ ಬಾಡಿಗೆ ಭತ್ಯೆ ನೀಡಬೇಕು. ಹೊಸ ನಿವೃತ್ತಿ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಗಳಿಕೆ ರಜೆ ನಗದೀಕರಣ ನೀಡಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನಾ ಮೆರವಣಿಗೆ:ಪ್ರತಿಭಟನಾಕಾರರುಚನ್ನಮ್ಮ ವೃತ್ತದಿಂದ ಮೆರವಣಿಗೆ ಮೂಲಕ ಆಗಮಿಸಿ, ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ವಿಭಾಗೀಯ ಸಂಚಾಲಕ ಶಿವಣ್ಣ ಹತ್ತಿ, ವಿ.ಜಿ. ಸೊಪ್ಪಿಮಠ, ಬಸವರಾಜ ಕೊಂಗಿ, ರಾಮಚಂದ್ರ ಸಾಳುಂಕೆ, ಎಂ.ಎಲ್.ಕುಲಕರ್ಣಿ ಸೇರಿ ವಿವಿಧ ಜಿಲ್ಲೆಗಳ ನೂರಾರು ದಿನಗೂಲಿ ನೌಕರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.