ADVERTISEMENT

‘ಅಮೃತ ಭಾರತಿಗೆ ಕನ್ನಡದಾರತಿ’ ಮೇ 28ರಂದು

​ಪ್ರಜಾವಾಣಿ ವಾರ್ತೆ
Published 13 ಮೇ 2022, 13:29 IST
Last Updated 13 ಮೇ 2022, 13:29 IST

ಬೆಳಗಾವಿ: ‘ಆಜಾದಿ ಕಾ ಅಮೃತ ಮಹೋತ್ಸವ ಸಂದರ್ಭದಲ್ಲಿ ಮೇ 28ರಂದು ‘ಅಮೃತ ಭಾರತಿಗೆ ಕನ್ನಡದಾರತಿ’ ಶೀರ್ಷಿಕೆಯಲ್ಲಿ ಜಿಲ್ಲೆಯ 4 ಕಡೆಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಇಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕೆಲವು ಸ್ಥಳೀಯ ಸಂಸ್ಥೆಗಳ ಉಪಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಜಾರಿಯಲ್ಲಿದೆ. ವೇದಿಕೆ ಕಾರ್ಯಕ್ರಮ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉನ್ನತ ಅಧಿಕಾರಿಗಳ ಗಮನಕ್ಕೆ ತಂದು ಮೇ 28ರ ಕಾರ್ಯಕ್ರಮ ನಡೆಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವುದು’ ಎಂದು ಹೇಳಿದರು.

ADVERTISEMENT

‘ಒಂದು ವೇಳೆ ಮೇ 28ರಂದೇ ಕಾರ್ಯಕ್ರಮ ನಡೆಸುವುದಾದರೆ ಅದಕ್ಕೆ ಸಂಬಂಧಿಸಿದಂತೆ ಉಪ ಸಮಿತಿಗಳನ್ನು ರಚಿಸಿ ಪೂರ್ವಸಿದ್ಧತೆ ನಡೆಸಬೇಕು. ಕಿತ್ತೂರು ಕೋಟೆ ಆವರಣ, ಬೆಳಗಾವಿ ವೀರಸೌಧ, ಹುದಲಿ ಹಾಗೂ ಹುಲಕುಂದ ಮೆರವಣಿಗೆ, ರೂಪಕ, ವೇದಿಕೆ ಕಾರ್ಯಕ್ರಮ, ಉಪನ್ಯಾಸ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಚಿತ್ರಪ್ರದರ್ಶನ ಏರ್ಪಡಿಸಲು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ‘ಮೇ 28ರಂದು ವೀರ ಸಾವರ್ಕರ್‌ ಜನ್ಮದಿನದ ನಿಮಿತ್ತ ಮೆರವಣಿಗೆ, ರೂಪಕ, ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮಗಳು, ವೇದಿಕೆ ಸಮಾರಂಭ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುವುದು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಬುಡಾ ಆಯುಕ್ತ ಪ್ರೀತಂ ನಸಲಾಪುರೆ, ಉಪವಿಭಾಗಧಿಕಾರಿ ರವೀಂದ್ರ ಕರಲಿಂಗಣ್ಣವರ, ಬೆಳಗಾವಿ ತಹಶೀಲ್ದಾರ್ ಆರ್.ಕೆ. ಕುಲಕರ್ಣಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.