
ಬೆಳಗಾವಿ: ‘ಚುನಾವಣೆ ಸಂದರ್ಭದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಸ್ವೀಪ್ ಚಟುವಟಿಕೆ ಬಹುಮುಖ್ಯವಾಗಿದೆ. ಸ್ವೀಪ್ ಚಟುವಟಿಕೆಗಳ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜನ ಸಾಮಾನ್ಯರಿಗೆ ಜಾಗೃತಿ ಮೂಡಿಸಬೇಕು’ ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ಅವರು ಜಿಲ್ಲೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಜರುಗಿದ ವಿಶೇಷ ಸಮಗ್ರ ಪರಿಷ್ಕರಣೆ ಸಿದ್ದತೆ, ಎಸ್.ಐ.ಆರ್/ ಎಸ್.ಎಸ್.ಆರ್ ಗಳ ಸಿದ್ದತೆ ಹಾಗೂ ಸ್ವೀಪ್/ ಇ.ಎಲ್.ಸಿ ಸಂಬಂಧಿತ ಕಾರ್ಯಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಸ್ತಿನ ಪರಿಷ್ಕರಣೆ ಮಾಡಬೇಕು’ ಎಂದು ಸಲಹೆ ನೀಡಿದರು.
‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವು ಎಷ್ಟು ಮುಖ್ಯ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಮತದಾನವು ಪರಿಪೂರ್ಣತೆಯಿಂದ ಕೂಡಿರಬೇಕಾದರೆ ಮತದಾರರ ಪಟ್ಟಿ ಪರಿಷ್ಕರಣೆ ಕಾಲಕ್ಕೆ ತಕ್ಕಂತೆ ನಡೆಯಬೇಕು. ಇದರಲ್ಲಿ ಯಾವುದೇ ಅಧಿಕಾರಿ, ಸಿಬ್ಬಂದಿ ಲೋಪ ಮಾಡಬಾರದು.
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಎಂದರೇನು? ಏಕೆ ಮತದಾರರ ಪಟ್ಟಿ ಪರಿಷ್ಕರಣೆ ಅವಶ್ಯಕ ಎಂಬುದರ ಕುರಿತು ಸಭೆಯಲ್ಲಿ ಎಲ್ಲ ಅಧಿಕಾರಿಗಳಿಗೆ ಮಾಹಿತಿ ನೀಡಿದ ಅವರು, ‘ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತು ಎಲ್ಲ ಹಂತದಲ್ಲಿ ಜನ ಸಾಮಾನ್ಯರಿಗೆ ಮಾಹಿತಿ ತಿಳಿಯಲು ಬ್ಯಾನರ್, ಕರ ಪತ್ರ ಹೀಗೆ ವಿವಿಧ ಚಟುವಟಿಕೆಗಳ ಮೂಲಕ ಜನರಿಗೆ ತಲುಪುವಂತೆ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದೂ ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಜಿಲ್ಲೆಯ ಸ್ವೀಪ್ ಮತ್ತು ಇಎಲ್‌ಸಿಗಳು ಶಾಲಾ –ಕಾಲೇಜುಗಳ ಮಾಹಿತಿಯನ್ನು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಯವರಿಗೆ ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿಯಾದ ವಿಜಯಕುಮಾರ ಹೊನಕೇರಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಎನ್. ಬಂಗಾರೆಪ್ಪನವರ, ಮಹಾನಗರ ಪಾಲಿಕೆ ಉಪ ಆಯುಕ್ತ ರೇಶ್ಮಾ ತಾಳಿಕೋಟಿ ಹಾಗೂ ಉದಯಕುಮಾರ ಬಿ.ಟಿ. ಡಿಡಿಪಿಯು ಎಂ.ಎಂ. ಕಾಂಬಳೆ, ಜಿಲ್ಲಾ ಪಿ.ಯು ನೋಡಲ್ ಅಧಿಕಾರಿ ಎಂ.ಎ.ಮುಲ್ಲಾ, ಡಿಡಿಪಿಐ ಲೀಲಾವತಿ ಹಿರೇಮಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡಾದ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.