ADVERTISEMENT

ನೇಕಾರರಿಗೆ ಪ್ಯಾಕೇಜ್ ಘೋಷಣೆಗೆ ಪಾಂಡುರಂಗ ಧೋತ್ರೆ ಗಡುವು

​ಪ್ರಜಾವಾಣಿ ವಾರ್ತೆ
Published 29 ಮೇ 2021, 10:46 IST
Last Updated 29 ಮೇ 2021, 10:46 IST

ಬೆಳಗಾವಿ: ‘ಕೋವಿಡ್–19 ಲಾಕ್‌ಡೌನ್ ಕಾರಣ ಸಂಕಷ್ಟಕ್ಕೆ ಸಿಲುಕಿರುವ ನೇಕಾರರಿಗೆ ಜೂನ್‌ 15ರ ಒಳಗೆ ₹ 10 ಸಾವಿರ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಇಲ್ಲದಿದ್ದಲ್ಲಿ ಜವಳಿ ಇಲಾಖೆಯ ಕಚೇರಿ ಎದುರು ಧರಣಿ ನಡೆಸಲಾಗುವುದು’ ಎಂದು ಜಿಲ್ಲಾ ನೇಕಾರರ ವೇದಿಕೆ ಅಧ್ಯಕ್ಷ ಪಾಂಡುರಂಗ ಧೋತ್ರೆ ಮತ್ತು ಉತ್ತರ ಕರ್ನಾಟಕ ನೇಕಾರರ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಪರಶುರಾಮ ಢಗೆ ಎಚ್ಚರಿಕೆ ನೀಡಿದರು.

ಇಲ್ಲಿನ ಅನಗೋಳದಲ್ಲಿರುವ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಶನಿವಾರ ಮನವಿ ಸಲ್ಲಿಸಿ ಅವರು ಮಾತನಾಡಿದರು.

‘ನಾಲ್ಕು ವರ್ಷಗಳಿಂದ ನೇಕಾರರು ಒಂದಿಲ್ಲೊಂದು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಜಿಎಸ್‌ಟಿ, ನೆರೆ, ಅತಿವೃಷ್ಟಿಯಿಂದ ಕಂಗಾಲಾಗಿದ್ದಾರೆ. ಹೋದ ವರ್ಷ ಕೋವಿಡ್ ಲಾಕ್‌ಡೌನ್‌ನಿಂದ ನಷ್ಟ ಅನುಭವಿಸಿದ್ದರು. ಈ ಬಾರಿಯೂ ಕೋವಿಡ್‌ನಿಂದ ನಲುಗಿ ಹೋಗಿದ್ದಾರೆ. ಆರ್ಥಿಕವಾಗಿ ತೀವ್ರ ಬಿಕ್ಕಟ್ಟು ಎದುರಾಗಿದ್ದು, ಆತ್ಮಹತ್ಯೆ ಪ್ರಕರಣಗಳು ಕೂಡ ಅಲ್ಲಲ್ಲಿ ವರದಿಯಾಗುತ್ತಿವೆ. ಹೀಗಾಗಿ, ನಮ್ಮ ಸಮಸ್ಯೆಗಳನ್ನು ಸರ್ಕಾರ ಸಹಾನುಭೂತಿಯಿಂದ ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ನೇಕಾರರು ನೇಯ್ದ ಸೀರೆಗಳ ಮೇಲಿನ ಜಿಎಸ್‌ಟಿ ರದ್ದುಗೊಳಿಸಬೇಕು. ರಾಜ್ಯದಲ್ಲಿ ಹೋದ ವರ್ಷ 23 ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಲ್ಲಿ ಮೂರು ಕುಟುಂಬಗಳಿಗೆ ಮಾತ್ರ ಪರಿಹಾರ ಸಿಕ್ಕಿದೆ. ಉಳಿದ ಕುಟುಂಬಗಳಿಗೂ ಕೂಡಲೇ ಪರಿಹಾರ ಕಲ್ಪಿಸಬೇಕು. ನೇಕಾರರೊಂಗೆ ಕೂಲಿ ನೇಕಾರರಿಗೂ ಆರ್ಥಿಕ ನೆರವು ಕಲ್ಪಿಸಬೇಕು. ನೇಕಾರರಿಂದ ನೇರವಾಗಿ ಸೀರೆ ಖರೀದಿಸಬೇಕು’ ಎಂದು ಆಗ್ರಹಿಸಿದರು.

‘ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಜವಳಿ ಸಚಿವ ಶ್ರೀಮಂತ ಪಾಟೀಲ ಅವರಿಗೂ ಮನವಿ ಸಲ್ಲಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.