ADVERTISEMENT

ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಉದ್ಯೋಗ ಮೇಳ: ಜಾಲತಾಣ ಅನಾವರಣಗೊಳಿಸಿದ ಶೆಟ್ಟರ್‌

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2020, 13:12 IST
Last Updated 16 ಫೆಬ್ರುವರಿ 2020, 13:12 IST
ಬೆಳಗಾವಿಯಲ್ಲಿ ಆಯೋಜಿಸಿರುವ ಉದ್ಯೋಗ ಮೇಳದ ಜಾಲತಾಣ ಅನಾವರಣ ಕಾರ್ಯಕ್ರಮಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಮಾತನಾಡಿದರು
ಬೆಳಗಾವಿಯಲ್ಲಿ ಆಯೋಜಿಸಿರುವ ಉದ್ಯೋಗ ಮೇಳದ ಜಾಲತಾಣ ಅನಾವರಣ ಕಾರ್ಯಕ್ರಮಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಮಾತನಾಡಿದರು   

ಬೆಳಗಾವಿ: ‘ಶಿಕ್ಷಣ ಪೂರ್ಣಗೊಳಿಸಿ ಉದ್ಯೋಗದ ನಿರಿಕ್ಷೇಯಲ್ಲಿರುವ ಯುವಕ, ಯುವತಿಯರಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಉದ್ಯೋಗವನ್ನು ಕಲ್ಪಿಸುವ ಉದ್ಧೇಶದಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ವತಿಯಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ’ ಎಂದು ಬೃಹತ್‌ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.

ಇಲ್ಲಿನ ಶಿವಬಸವನಗರದಲ್ಲಿರುವ ಎಸ್.ಜಿ. ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಫೆ. 28 ಹಾಗೂ 29ರಂದು ನಡೆಯಲಿರುವ ಬೆಳಗಾವಿ, ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯ ಪ್ರಾದೇಶಿಕ ಉದ್ಯೋಗ ಮೇಳದ ಅಂಗವಾಗಿ ಅಭಿವೃದ್ಧಿಪಡಿಸಲಾಗಿರುವ ವಿಶೇಷ ಜಾಲತಾಣವನ್ನು (www.belagaviudyogamela.in) ಪ್ರವಾಸಿಮಂದಿರದಲ್ಲಿ ಭಾನುವಾರ ಅನಾವರಣಗೊಳಿಸಿ ಅವರು ಮಾತನಾಡಿದರು.

‘ಮೇಳದಲ್ಲಿ 150 ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ. 15ಸಾವಿರಕ್ಕೂ ಹೆಚ್ಚು ಜನರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರು ಹೊರತುಪಡಿಸಿ ಪ್ರಥಮ ಬಾರಿಗೆ ದೊಡ್ಡಮಟ್ಟದ ಉದ್ಯೋಗ ಮೇಳವನ್ನು ಬೆಳಗಾವಿಯಲ್ಲಿ ಮಾಡುತ್ತಿದ್ದೇವೆ. ಈ ಉದ್ಯೋಗ ಮೇಳಕ್ಕೆ ಎಲ್ಲರ ಸಹಕಾರ ಮುಖ್ಯ. ಇದರಿಂದ ಯುವಕರಿಗೆ ಹೆಚ್ಚಿನ ಅವಕಾಶಗಳು ಸಿಗುತ್ತವೆ’ ಎಂದು ಹೇಳಿದರು.

ADVERTISEMENT

‘ಉದ್ಯೋಗ ಮೇಳ ಹಾಗೂ ಹೂಡಿಕೆದಾರರ ಸಮಾವೇಶಗಳ ಮೂಲಕ ಉತ್ತರ ಕರ್ನಾಟಕದಲ್ಲಿ ಒಂದು ಪ್ರಯೋಗ ಮಾಡುತ್ತಿದ್ದೇವೆ.‌ ಈ ಪ್ರಯತ್ನ ಮುಂದುವರಿಯಲಿದೆ. ಬೆಳಗಾವಿಯಲ್ಲಿ ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಗಲಿದೆ. ಮುಂದಿನ ದಿನಗಳಲ್ಲಿ ಕಿತ್ತೂರು ಧಾರವಾಡ ರೈಲು ಮಾರ್ಗ ನಿರ್ಮಾಣವಾದರೆ ಬೆಳಗಾವಿ, ಹುಬ್ಬಳ್ಳಿ ಹಾಗೂ ಧಾರವಾಡ ನಗರಗಳನ್ನು ತ್ರಿವಳಿ ನಗರ ಮಾಡುವುದು ನಮ್ಮ ಕನಸಾಗಿದೆ’ ಎಂದು ಮಾಹಿತಿ ನೀಡಿದರು.

‘ಹುಬ್ಬಳ್ಳಿಯಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ, ಬೆಳಗಾವಿಯಲ್ಲೂ ಉದ್ಯಮ ಸ್ಥಾಪನೆಗೆ ಒ‍ಪ್ಪಂದ ಮಾಡಿಕೊಳ್ಳಲಾಗಿದೆ. ಹುಬ್ಬಳ್ಳಿಯಲ್ಲಿ ಸಮಾವೇಶ ಆಯೋಜಿಸಿದ್ದ ಮಾತ್ರಕ್ಕೆ ಅದು ಅಲ್ಲಿಗೇ ಸೀಮಿತವಾಗಿರಲಿಲ್ಲ. ಇಡೀ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹೂಡಿಕೆದಾರರನ್ನು ಸೆಳೆಯುವ ಪ್ರಯತ್ನ ಮಾಡಿದ್ದೇವೆ. ಯಾವ ಜಿಲ್ಲೆಯನ್ನೂ ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಹಿಂದಿನ ಯಾವ ಕೈಗಾರಿಕಾ ಸಚಿವರೂ ಮಾಡದಿರುವ ಕೆಲಸವನ್ನು ನಾನು ಮಾಡುತ್ತಿದ್ದೇನೆ. ಇದನ್ನು ಪ್ರೋತ್ಸಾಹಿಸಬೇಕು’ ಎಂದರು.

ಜಿಲ್ಲಾಧಿಕಾರಿ ಡಾ‌.ಎಸ್.ಬಿ.‌ ಬೊಮ್ಮನಹಳ್ಳಿ ಮಾತನಾಡಿ, ‘ಬೆಳಗಾವಿ ಹಾಗೂ ಧಾರವಾಡ ಜಿಲ್ಲಾಡಳಿತ, ಕೌಶಲ ಅಭಿವೃದ್ಧಿ, ಉದ್ದಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಮೇಳ ಆಯೋಜಿಸಲಾಗಿದೆ. ಧಾರವಾಡ, ಬೆಳಗಾವಿ ಹಾಗೂ ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳೊಂದಿಗೆ ಮಾತನಾಡಿದ್ದೇವೆ. ಜಾಲತಾಣದಲ್ಲಿ ವಿವರ ಲಭ್ಯವಿದೆ’ ಎಂದು ತಿಳಿಸಿದರು.

ಎಸ್ಪಿ ಲಕ್ಷ್ಮಣ ನಿಂಬರಗಿ, ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸಂಜಯ ಪಾಟೀಲ್, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.