ADVERTISEMENT

ಬೆಳಗಾವಿಯಲ್ಲಿ ಶನಿವಾರ, ಭಾನುವಾರ ಪೂರ್ಣ ಲಾಕ್‌ಡೌನ್‌

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 13:15 IST
Last Updated 11 ಜೂನ್ 2021, 13:15 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಳಗಾವಿ: ಜಿಲ್ಲೆಯಾದ್ಯಂತ ಜೂನ್ 12ರ ಬೆಳಿಗ್ಗೆ 6ರಿಂದ ಜೂನ್ 14ರ ಬೆಳಿಗ್ಗೆ 6ರವರೆಗೆ ಪೂರ್ಣ ಲಾಕ್‌ಡೌನ್‌ ಘೋಷಿಸಲಾಗಿದೆ.

ಕೋವಿಡ್-19 ಹರಡುವುದನ್ನು ತಡೆಗಟ್ಟಲು ಜೂನ್ 14ರ ಬೆಳಿಗ್ಗೆ 6ರವರೆಗೆ ಸಾರ್ವಜನಿಕರು ಅನವಶ್ಯವಾಗಿ ಓಡಾಡುವುದನ್ನು ನಿಷೇಧಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿತ್ತು. ಆದರೆ, ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ವಾರಾಂತ್ಯದಲ್ಲಿ ಪೂರ್ಣ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸಂಚರಿಸಲು, ಅಗತ್ಯ ವಸ್ತುಗಳಾದ ಹಾಲು, ಔಷಧಿ ಪೂರೈಕೆ ಮತ್ತು ಖರೀದಿಗೆ ಹಾಗೂ ಆನ್‌ಲೈನ್ ಫುಡ್ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ, ಸರ್ಕಾರಿ ಅಧಿಕಾರಿಗಳಿಗೆ ಸಭೆಗೆ ಹಾಜರಾಗಲು ಮಾತ್ರ ಸಂಚರಿಸಲು ಅವಕಾಶವಿದೆ.

ADVERTISEMENT

ಪೂರ್ಣ ಲಾಕ್‌ಡೌನ್ ದಿನಗಳಂದು ಸಾರ್ವಜನಿಕ ವಿತರಣಾ ಪದ್ಧತಿಯಲ್ಲಿ ಬರುವ ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 6ರಿಂದ ಬೆಳಿಗ್ಗೆ 10 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಬೇಕು. ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಂಗಡಿಗಳನ್ನು ತೆರೆದು ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಿಸಲು ಅವಕಾಶ ಇರುತ್ತದೆ. ಪ್ರತಿ ಗ್ರಾಮದಿಂದ ಐವರಿಗೆ ಮಾತ್ರ ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳಿಗೆ ಹೋಗಲು ಅವಕಾಶವಿದೆ.

ಬೆಳಗಾವಿ ನಗರದಲ್ಲಿ ಬೀಜ, ರಸಗೊಬ್ಬರ ಹಾಗೂ ಇತರ ಪರಿಕರಗಳ ಮಾರಾಟ ಮಳಿಗೆಗಳು ಲಾಕ್‌ಡೌನ್‌ ದಿನಗಳಂದು ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ತೆರೆಯಲು ಅವಕಾಶವಿದೆ. ಅಲ್ಲಿಗೆ ತೆರಳುವ ರೈತರು ಗ್ರಾಮ ಪಂಚಾಯಿತಿ ಪಿಡಿಒ ಅಥವಾ ಗ್ರಾಮಲೆಕ್ಕಿಗರ ಅನುಮತಿ ಪಡೆಯಬೇಕು. ಅಲ್ಲದೇ, ಆದೇಶದಲ್ಲಿ ಸೂಚಿಸಿರುವ ದಿನಗಳಂದು ಪೂರ್ವಾನುಮತಿ ಪಡೆದು ನಿಗದಿಪಡಿಸಿರುವ ಮದುವೆ ಸಮಾರಂಭಗಳಿಗೆ ಮಾತ್ರ ಅವಕಾಶವಿದೆ. ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.