ADVERTISEMENT

ಜನಪ್ರಿಯ ಅಭ್ಯರ್ಥಿಗೆ ಉಪ ಚುನಾವಣೆ ಟಿಕೆಟ್: ಸತೀಶ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 8:20 IST
Last Updated 1 ಅಕ್ಟೋಬರ್ 2020, 8:20 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ   

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ, ಜನಪ್ರಿಯ ಮತ್ತು ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗೆ ಪಕ್ಷದ ಟಿಕೆಟ್‌ ಕೊಡುತ್ತೇವೆ. ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.

ನಗರದಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇನ್ನೂ ಆಕಾಂಕ್ಷಿಗಳು ಮುಂದೆ ಬಂದಿಲ್ಲ. ಪಕ್ಷದ ವೇದಿಕೆಯಲ್ಲಿ ಚರ್ಚೆ ಆರಂಭವಾಗಿಲ್ಲ. 15 ದಿನಗಳಲ್ಲಿ ಮುಖಂಡರ ಸಭೆ ಕರೆದು ಸಮಾಲೋಚಿಸುತ್ತೇನೆ’ ಎಂದು ಹೇಳಿದರು.

‘ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲ್ಲಲ್ಲು ಪ್ರಯತ್ನಿಸುತ್ತೇವೆ. ಶಿರಾದಲ್ಲಿ ಪಕ್ಷದ ಆಂತರಿಕ ಸಮಸ್ಯೆಯಿಂದ ಹೋದ ಚುನಾವಣೆಯಲ್ಲಿ ಸೋಲಾಗಿತ್ತು. ಈಗ ಎಲ್ಲರೂ ಒಂದಾಗಿ ಚುನಾವಣೆ ಎದುರಿಸುತ್ತೇವೆ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

‘ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಸ್ಪಂದನೆ ಸಿಗಲಿಲ್ಲ. ಸರ್ಕಾರ ಸರಿಯಾದ ಉತ್ತರ ಕೊಟ್ಟಿಲ್ಲ. ಈ ವಿಷಯವನ್ನು ಜನರ ಮುಂದಿಡುತ್ತೇವೆ’ ಎಂದರು.

‘ಅ.2ರಂದು ಘಟಪ್ರಭಾದ ಕಾಂಗ್ರೆಸ್ ಸೇವಾ ದಳ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಿಸಲಾಗುವುದು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಪರಿಷತ್ ವಿರೋಧ‍ ಪಕ್ಷದ ನಾಯಕ ಎಸ್.ಆರ್. ಪಾಟೀಲ ಭಾಗವಹಿಸಲಿದ್ದಾರೆ. ಸಂಜೆ 4ಕ್ಕೆ ನಗರದಲ್ಲಿ ನಿರ್ಮಿಸಿರುವ ಕಾಂಗ್ರೆಸ್‌ ಭವನದ ಉದ್ಘಾಟನೆಯನ್ನೂ ನೆರವೇರಿಸುವರು’ ಎಂದು ಮಾಹಿತಿ ನೀಡಿದರು.

‘ಸೇವಾ ದಳ ತರಬೇತಿ ಕಟ್ಟಡದ ಉದ್ಘಾಟನೆಗೆ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ಆಹ್ವಾನಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.