ಸುವರ್ಣ ವಿಧಾನಸೌಧ (ಬೆಳಗಾವಿ): ಬುಧವಾರವೂ ವಿಧಾನಸಭೆಯ ಕಲಾಪ ತಡರಾತ್ರಿವರೆಗೆ ನಡೆಯಿತು. ರಾತ್ರಿ 12.40ರವರೆಗೂ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚೆ ನಡೆಯಿತು.
ನಂತರ ಅನುದಾನ ಬಿಡುಗಡೆ ವಿಳಂಬದ ಕುರಿತು ಚರ್ಚೆ ಆರಂಭವಾಯಿತು. ಸಭಾಧ್ಯಕ್ಷ ಯು.ಟಿ. ಖಾದರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಹಲವು ಸದಸ್ಯರು ಸದನದಲ್ಲಿದ್ದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಅನುದಾನ ಕೊಡಿಸುವುದಾಗಿ ಮಧ್ಯವರ್ತಿಗಳು ಗುತ್ತಿಗೆದಾರರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಬಿಜೆಪಿಯ ಎಚ್.ಕೆ. ಸುರೇಶ್ ಮತ್ತು ಸಿಮೆಂಟ್ ಮಂಜು ಆರೋಪಿಸಿದರು.
ಉತ್ತರ ನೀಡಿದ ಪ್ರಿಯಾಂಕ್ ಖರ್ಗೆ, 'ನಮ್ಮ ಕಚೇರಿಯಲ್ಲಿ ಯಾವುದೇ ರೀತಿಯ ಹಣ ಸಂಗ್ರಹಿಸುತ್ತಿಲ್ಲ. ಆರೋಪಕ್ಕೆ ಪೂರಕವಾದ ಸಾಕ್ಷ್ಯಗಳಿದ್ದರೆ ದಾಖಲೆ ಒದಗಿಸಲಿ, ತನಿಖೆ ನಡೆಸಿ, ಕ್ರಮ ಜರುಗಿಸುತ್ತೇನೆ' ಎಂದು ಭರವಸೆ ನೀಡಿದರು.
ಕಂಬಳಕ್ಕೆ ಸರ್ಕಾರದಿಂದ ಅನುದಾನ ನೀಡುವಂತೆ ಕಾಂಗ್ರೆಸ್ ಸದಸ್ಯ ಅಶೋಕ್ ಕುಮಾರ್ ರೈ ಆಗ್ರಹಿಸಿದರು. ಸಂಬಂಧಿಸಿದ ಸಚಿವರ ಜೊತೆ ಚರ್ಚಿಸಿ ಕ್ರಮಕೈಗೊಳ್ಳುವುದಾಗಿ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.
ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ ಕುರಿತು ಕಾಂಗ್ರೆಸ್ ಸದಸ್ಯ ದರ್ಶನ್ ಧ್ರುವ ನಾರಾಯಣ್ ಗಮನ ಸೆಳೆದರು. ಆರೋಗ್ಯ ಸಚಿವರ ಜೊತೆ ಚರ್ಚಿಸಿ ಸಮಸ್ಯೆಗೆ ಪರಿಹಾರ ಒದಗಿಸುವುದಾಗಿ ಕೃಷ್ಣ ಬೈರೇಗೌಡ ಭರವಸೆ ನೀಡಿದರು.
ಸ್ವಕುಳ ಸಾಳಿ ಸಮುದಾಯಕ್ಕೆ ನಿಗಮ ಸ್ಥಾಪಿಸುವಂತೆ ಬಿಜೆಪಿಯ ಮಹೇಶ್ ಟೆಂಗಿನಕಾಯಿ, ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ಸ್ಥಾಪಿಸುವಂತೆ ಬಿಜೆಪಿಯ ಬಿ.ವೈ. ವಿಜಯೇಂದ್ರ ಪರವಾಗಿ ಶರಣು ಸಲಗರ ಆಗ್ರಹಿಸಿದರು. ಈಗಾಗಲೇ ಘೋಷಿಸಿರುವ 11 ನಿಗಮಗಳಿಗೆ ಅನುದಾನ ಮೀಸಲಿಟ್ಟಿಲ್ಲ. ಅನುದಾನದ ಲಭ್ಯತೆ ಆಧರಿಸಿ ನಿರ್ಧರಿಸಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.