ADVERTISEMENT

ಶಿಕ್ಷಣದಿಂದ ಮಾತ್ರ ಮಹಿಳೆಯರ ಅಭಿವೃದ್ಧಿ ಸಾಧ್ಯ: ಜಿಲ್ಲಾಧಿಕಾರಿ

ಮಹಿಳಾ ದಿನಾಚರಣೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2021, 5:33 IST
Last Updated 13 ಮಾರ್ಚ್ 2021, 5:33 IST

ಬೆಳಗಾವಿ: ‘ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಯು ಶಿಕ್ಷಣದಿಂದ ಮಾತ್ರ ಸಾಧ್ಯ. ಹೀಗಾಗಿ, ಶಿಕ್ಷಣದಿಂದ ವಂಚಿತವಾಗದಂತೆ ಎಲ್ಲರೂ ನೋಡಿಕೊಳ್ಳಬೇಕು’ ಎಂದು ಎಂ.ಜಿ. ಹಿರೇಮಠ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಸಹಯೋಗದಲ್ಲಿ ನಗರದ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ಈಚೆಗೆ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸರ್ಕಾರವು ಮಹಿಳೆಯರಿಗೆ ಎಲ್ಲ ರಂಗಗಳಲ್ಲೂ ಭಾಗವಹಿಸುವಂತೆ ಉತ್ತೇಜಿಸುತ್ತಿದೆ. ಅದರಂತೆ ಹೆಣ್ಣು ಮಕ್ಕಳು ಪುರುಷರಿಗೆ ಸಮಾನವಾದ ರೀತಿಯಲ್ಲಿ ಅಭಿವೃದ್ಧಿ ಹೊಂದುತ್ತಿದ್ದಾರೆ. ಯುದ್ಧ ವಿಮಾನಗಳಲ್ಲೂ ಮಹಿಳೆಯರು ನೇಮಕಗೊಳ್ಳುತ್ತಿರುವುದು ದೊಡ್ಡ ಸಾಧನೆಯಾಗಿದೆ. ಸ್ತ್ರೀ ಶಕ್ತಿ ಗುಂಪುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು’ ಎಂದರು.

ADVERTISEMENT

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜ ವರವಟ್ಟಿ, ‘ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಪ್ರೋತ್ಸಾಹಿಸುವುದು ಇಲಾಖೆಯ ಧ್ಯೇಯವಾಗಿದೆ’ ಎಂದು ಹೇಳಿದರು.

ಲೋಕಾಯುಕ್ತ ಎಸ್ಪಿ ಯಶೋಧಾ ವಂಟಗೋಡಿ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಮಹಿಳೆಯು ಯಾವುದೇ ರಂಗಗಳಲ್ಲಿಯೂ ಹಿಂದೆ ಉಳಿದಿಲ್ಲ. ಎಲ್ಲ ಕ್ಷೇತ್ರಗಳಲ್ಲೂ ತಮ್ಮ ಗುರುತು ಮೂಡಿಸುತ್ತಿದ್ದಾರೆ. ಆದರೂ ಸಮಾಜದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಅನೇಕ ರೀತಿಯ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಕೆಲವೊಂದು ಸಂದರ್ಭಗಳಲ್ಲಿ ಅಸಮಾನತೆಯಿಂದ ನೋಡಲಾಗುತ್ತಿದೆ’ ಎಂದು ವಿಷಾದಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯ ದೇವರಾಜ ಅರಸ್ ಮಾತನಾಡಿದರು.

ತಮ್ಮ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವಂತೆ ಸ್ತ್ರೀಶಕ್ತಿ ಸಂಘದವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಅಂಧ ಮಕ್ಕಳ ಶಾಲೆ ಅಧ್ಯಕ್ಷರಾದ ವಿಕಾಸ್ ಕಲಘಟಗಿ ಇದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಕಾರ್ಯಕ್ರಮ ನಿರೂಪಣಾಧಿಕಾರಿ ನವೀನಕುಮಾರ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.