ADVERTISEMENT

ವಿಶ್ವಪರಿಸರ ದಿನ: ಪ್ಲಾಸ್ಟಿಕ್‌ ಮುಕ್ತ ಗ್ರಾಮ ಅಭಿಯಾನಕ್ಕೆ ಜಿ.ಪಂ ಸಿಇಒ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 26 ಮೇ 2025, 14:18 IST
Last Updated 26 ಮೇ 2025, 14:18 IST
ರಾಹುಲ್‌ ಶಿಂಧೆ
ರಾಹುಲ್‌ ಶಿಂಧೆ   

ಬೆಳಗಾವಿ: ‘ಈ ವರ್ಷವೂ ಜೂನ್ 5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ‘ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು’ ಎಂಬ ಘೋಷವಾಕ್ಯದೊಂದಿಗೆ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು ಈ ಬಾರಿಯ ಉದ್ದೇಶ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್‌ ಶಿಂಧೆ ಹೇಳಿದ್ದಾರೆ.

‘ಮೇ 22ರಿಂದಲೇ ಇದರ ಅಭಿಯಾನ ಆರಂಭಿಸಲಾಗಿದೆ. ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುವ ದುಷ್ಪರಿಣಾಮಗಳು ಹಾಗೂ ಇದರ ನಿರ್ಮೂಲನೆ ಮಾಡುವ ಸಂಬಂಧ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯಿತಿಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಈ ಅಭಿಯಾನದಲ್ಲಿ ಚುನಾಯಿತ ಪ್ರತಿನಿಧಿಗಳು, ಯುವಕರು, ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು, ಸ್ವಯಂ ಸೇವಕರು ಮತ್ತು ಗ್ರಾಮದ ಮುಖಂಡರು ಅಭಿಯಾನದಲ್ಲಿ ಪಾಲ್ಗೊಳ್ಳುವುದು ಕಡ್ಡಾಯ’ ಎಂದು ಅವರು ತಿಳಿಸಿದ್ದಾರೆ.

‘ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯು ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯ ಘನತ್ಯಾಜ್ಯ ನಿರ್ವಹಣೆಯ ಪ್ರಮುಖ ಭಾಗವಾಗಿದೆ. ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗ್ರಾಮಗಳನ್ನು ಪ್ಲಾಸ್ಟಿಕ್ ಮುಕ್ತ ಗ್ರಾಮಗಳನ್ನಾಗಿ ರೂಪಿಸಲು ಪ್ರತಿ ಗ್ರಾಮ ಪಂಚಾಯಿತಿ ಕ್ರಮವಹಿಸಬೇಕಿದೆ’ ಎಂದು ತಿಳಿಸಿದ್ದಾರೆ.

ADVERTISEMENT

‘ಏಕ ಬಳಕೆಯ ಪ್ಲಾಸ್ಟಿಕ್ ತ್ಯಜಿಸುವುದು ಮತ್ತು ಅದರ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು. ಪ್ಲಾಸ್ಟಿಕ್ ಕವರ್‌ಗಳನ್ನು ಗ್ರಾಹಕರಿಗೆ ನೀಡುವ ಅಂಗಡಿ, ಹೋಟೆಲ್, ಬೇಕರಿ, ಇತರೆ ವಾಣಿಜ್ಯ ಕೇಂದ್ರಗಳ ತಪಾಸಣೆ, ಜಲ ಮೂಗಳ ಸ್ವಚ್ಛಗೊಳಿಸುವುದು ಮತ್ತು ಸುತ್ತ-ಮುತ್ತ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗದಂತೆ ಕ್ರಮಕೈಗೊಳ್ಳುವುದು. ಚರಂಡಿಗಳನ್ನು ಸ್ವಚ್ಛಗೊಳಿಸುವುದು ಹಾಗೂ ಚರಂಡಿಗಳಲ್ಲಿ ತ್ಯಾಜ್ಯ ಮತ್ತು ಪ್ಲಾಸ್ಟಿಕ್ ಎಸೆಯದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಇದರು ಮುಖ್ಯ ಕಾರ್ಯಕ್ರಮಗಳು’ ಎಂದು ಅವರು ನಿರ್ದೇಶನ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.