ಬೆಳಗಾವಿ: ‘ಜಿಲ್ಲೆಯ ಗ್ರಂಥಾಲಯಗಳಲ್ಲಿ ಇರುವ ಪುಸ್ತಕಗಳು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವವರಿಗೆ ನೆರವಾಗಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ರಾಹುಲ್ ಶಿಂಧೆ ಹೇಳಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಗ್ರಾಮ ಪಂಚಾಯಿತಿ ಗ್ರಂಥಪಾಲಕರು ಮತ್ತು ಮೇಲ್ವಿಚಾರಕರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಮಾಹಿತಿ ಸಂಗ್ರಹಣೆಗೆ ಸಹಾಯ ಮಾಡುವುದೇ ಗ್ರಂಥಾಲಯಗಳ ಉದ್ದೇಶ. ಗ್ರಂಥಾಲಯಗಳು ತಮ್ಮ ಸೇವೆ ಹಾಗೂ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳುವಂತೆ ಎಲ್ಲರೂ ಕಾರ್ಯ ನಿರ್ವಹಿಸಬೇಕು. ಗ್ರಂಥಾಲಯಗಳು ಮುಖ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಮಾಹಿತಿ ಒದಗಿಸಬೇಕು’ ಎಂದರು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ‘ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಸೇವೆ ಸಲ್ಲಿಸುವ ಗ್ರಂಥಪಾಲಕರಿಗೆ ವೇತನ ಪಾವತಿಸಲು ಬಯೊಮೆಟ್ರಿಕ್ ವ್ಯವಸ್ಥೆ ಕಡ್ಡಾಯಗೊಳಿಸಲಾಗಿದೆ. ಬಯೊಮೆಟ್ರಿಕ್ ಹಾಜರಾತಿ ಆಧರಿಸಿ, ಅವರಿಗೆ ವೇತನ ಪಾವತಿಸಲಾಗುವುದು’ ಎಂದು ತಿಳಿಸಿದರು.
‘ತಮ್ಮ ಕರ್ತವ್ಯದ ಅವಧಿಯಲ್ಲಿ ಗ್ರಂಥಾಲಯದಲ್ಲಿ ಗ್ರಂಥಪಾಲಕರು ಕಡ್ಡಾಯವಾಗಿ ಹಾಜರಿರಬೇಕು. ಗ್ರಂಥಾಲಯಕ್ಕೆ ಬರುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಶುಚಿತ್ವ ಕಾಪಾಡಿಕೊಂಡು ಸೂಕ್ತ ರೀತಿಯಲ್ಲಿ ಗ್ರಂಥಾಲಯಗಳ ನಿರ್ವಹಣೆ ಮಾಡಬೇಕು’ ಎಂದು ಸಲಹೆ ನೀಡಿದರು.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳ ಗ್ರಂಥಪಾಲಕರು ಮತ್ತು ಮೇಲ್ವಿಚಾರಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.