ADVERTISEMENT

ಅಂತರ್ಜಾಲ ಪ್ರಪಂಚ ಕಾರ್ಯಕ್ರಮದಲ್ಲಿ ಬಚ್ಚೇಗೌಡ :ಅಂತರ್ಜಾಲ ಅರಿವು ಅನಿವಾರ್ಯ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2012, 19:30 IST
Last Updated 8 ಅಕ್ಟೋಬರ್ 2012, 19:30 IST

ಮಹದೇವಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬರಿಗೂ ಅಂತರ್ಜಾಲದ ಬಗ್ಗೆ ಅರಿವು ಇರಲೇಬೇಕಾದ ಅಗತ್ಯವಿದೆ ಎಂದು ಕಾರ್ಮಿಕ ಸಚಿವ ಬಿ.ಎನ್.ಬಚ್ಚೇಗೌಡ ಅಭಿಪ್ರಾಯಪಟ್ಟರು.

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಕ್ಷೇತ್ರದ ಬಿದರಹಳ್ಳಿಯಲ್ಲಿನ ಈಸ್ಟ್ ಪಾಯಿಂಟ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ `ವಿದ್ಯಾರ್ಥಿಗಳ ಅಂತರ್ಜಾಲ ಪ್ರಪಂಚ-2012~ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಗ್ರಾಮಾಂತರ ಪ್ರದೇಶದಲ್ಲಿನ ಮಕ್ಕಳಿಗೆ ಅಂತರ್ಜಾಲದ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಏರ್ಪಡಿಸಬೇಕು. ಆ ನಿಟ್ಟಿನಲ್ಲಿ ಈಸ್ಟ್ ಪಾಯಿಂಟ್ ತಾಂತ್ರಿಕ ಮಹಾವಿದ್ಯಾಲಯ ಸರ್ಕಾರಿ ಶಾಲಾ ಮಕ್ಕಳಿಗಾಗಿ ಅಂತರ್ಜಾಲದ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವನ್ನು ಏರ್ಪಡಿಸಿರುವುದು ಪ್ರಶಂಸನೀಯ~ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಎಂ.ಜಿ.ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ ಎಸ್.ಎಂ.ವೆಂಕಟಪತಿ, `ಸರ್ಕಾರಿ ಶಾಲಾ ಮಕ್ಕಳಿಗಾಗಿ ಕಾಲೇಜಿನಲ್ಲಿ ಆಗಾಗ್ಗೆ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ~ ಎಂದರು. ಈ ಕಾರ್ಯಕ್ರಮದಲ್ಲಿ ಒಟ್ಟು 400ಕ್ಕೂ ಹೆಚ್ಚು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್.ವಿ.ವೆಂಕಟೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜೇಗೌಡ, ಎಂ.ಜಿ.ಚಾರಿಟಬಲ್ ಟ್ರಸ್ಟ್‌ನ ನಿರ್ದೇಶಕರಾದ ಬಿ.ಐ.ರಮಾದೇವಿ, ಎಸ್.ವಿ.ಪ್ರಮೋದ, ಎಸ್.ವಿ.ರಾಜೀವಗೌಡ, ಡಾ.ಆರ್.ವೆಂಕಟರಾಮ್, ಪ್ರಾಂಶುಪಾಲರಾದ ಡಾ.ಗಿರಿಧರರೆಡ್ಡಿ, ಡಾ.ಬಿ.ಎಂ.ಸತೀಶ, ಪ್ರೊ.ಮುದ್ದಣ್ಣ ಮತ್ತು ನಿರಂಜನ ಪ್ರಭು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.