ADVERTISEMENT

ಅಕ್ರಮ ಅಪಾರ್ಟ್‌ಮೆಂಟ್ ನಿರ್ಮಾಣ: ಅಧಿಕಾರಿ ಹಾಜರಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2012, 22:00 IST
Last Updated 8 ಡಿಸೆಂಬರ್ 2012, 22:00 IST

ಬೆಂಗಳೂರು: ನಗರದ ಎಂಎಲ್‌ಎ ಬಡಾವಣೆಯಲ್ಲಿ ರಸ್ತೆ ನಿರ್ಮಿಸಲು ಮೀಸಲಿಟ್ಟ ಜಾಗದಲ್ಲಿ ಅಕ್ರಮವಾಗಿ ಅಪಾರ್ಟ್‌ಮೆಂಟ್ ನಿರ್ಮಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಗಂಗಾನಗರ ವಿಭಾಗದ ಸಹಾಯಕ ಕಂದಾಯ ಅಧಿಕಾರಿ ಖುದ್ದು ಹಾಜರಿರಬೇಕು ಎಂದು ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.

ಶಕುಂತಲಾ ಚೌಗಲೆ ಮತ್ತು ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ, ರಸ್ತೆ ನಿರ್ಮಿಸಲು ಉದ್ದೇಶಿಸಿದ್ದ ಜಾಗದಲ್ಲಿ ಕೆಕೆಆರ್ ವಜ್ರ ಎಂಬ ಖಾಸಗಿ ಸಂಸ್ಥೆಗೆ ಅಪಾರ್ಟ್‌ಮೆಂಟ್ ನಿರ್ಮಿಸಲು ಅವಕಾಶ ನೀಡಿದ ಕಾರಣಕ್ಕೆ ಬಿಬಿಎಂಪಿ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತು.

ಕೆಲವೆಡೆ ಒತ್ತುವರಿ ತೆರವುಗೊಳಿಸಲಾಗಿದೆ. ರಸ್ತೆಗೆಂದು ಬಿಟ್ಟಿದ್ದ ಜಾಗದಲ್ಲಿ 900 ಅಡಿಯನ್ನು ಅಪಾರ್ಟ್‌ಮೆಂಟ್ ನಿರ್ಮಾಣಕ್ಕೆ ಬಳಸಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಪರ ವಕೀಲರು ವಿವರಿಸಿದರು. ಈ ಅಪಾರ್ಟ್‌ಮೆಂಟ್ ನಿರ್ಮಾಣಕ್ಕೆ ತಮ್ಮಿಂದ ಅನುಮತಿ ನೀಡಲಾಗಿಲ್ಲ ಎಂದು ಬಿಡಿಎ ಪರ ವಕೀಲರು ಸ್ಪಷ್ಟನೆ ನೀಡಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮುಖ್ಯ ನ್ಯಾಯಮೂರ್ತಿ ಸೇನ್, `ಈ ಯೋಜನೆಗೆ ನೀವು ಅನುಮತಿ ನೀಡಿದ್ದಾದರೂ ಹೇಗೆ? ಅಪಾರ್ಟ್‌ಮೆಂಟ್‌ನ ಕಾಲು ಭಾಗ ರಸ್ತೆಗೆಂದು ಬಿಟ್ಟಿದ್ದ ಜಾಗದಲ್ಲಿದೆ. ಇದರಲ್ಲಿ ಅನುಮಾನವೇ ಇಲ್ಲ. ಇದು ಭ್ರಷ್ಟಾಚಾರವಲ್ಲದೆ ಮತ್ತೇನು?' ಎಂದು ಮೌಖಿಕವಾಗಿ ಪ್ರಶ್ನಿಸಿದರು. ವಿಚಾರಣೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.