ADVERTISEMENT

ಅಧ್ಯಕ್ಷರಿಲ್ಲದ ಆಯೋಗ: ಮಳಿಮಠ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2012, 21:01 IST
Last Updated 10 ಡಿಸೆಂಬರ್ 2012, 21:01 IST

ಬೆಂಗಳೂರು: ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸದ ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ರಾಜ್ಯ ಕಾನೂನು ಆಯೋಗದ ಅಧ್ಯಕ್ಷ ವಿ. ಎಸ್.ಮಳಿಮಠ, ಈ ಬಗ್ಗೆ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದರು.

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಸೋಮವಾರ ಇಲ್ಲಿ ಏರ್ಪಡಿಸಿದ್ದ `ವಿಶ್ವ ಮಾನವ ಹಕ್ಕುಗಳ ದಿನಾಚರಣೆ' ಉದ್ಘಾಟಿಸಿ ಮಾತನಾಡಿದ ಅವರು, `ಅಧ್ಯಕ್ಷ ಸ್ಥಾನ ತೆರವಾಗಿರುವುದು ಸರ್ಕಾರಕ್ಕೆ ಗೊತ್ತಿದ್ದರೂ ಹೊಸಬರನ್ನು ನೇಮಕ ಮಾಡದೇ ಇರುವುದು ಸರಿಯಲ್ಲ' ಎಂದರು.

ಕಾರ್ಯಕ್ರಮಕ್ಕೆ ಬಂದಿದ್ದ ಕೆಲ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು, `ದಿನೇ ದಿನೇ ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿವೆ. ಆದರೆ, ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸಲು ಸರ್ಕಾರ ಕ್ರಮ ಕೈಗೊಂಡಿಲ್ಲ. ಅಧ್ಯಕ್ಷರಿಲ್ಲದೆ ಕಾರ್ಯಕ್ರಮ ನಡೆಯುತ್ತಿರುವುದು ಬೇಸರವನ್ನುಂಟು ಮಾಡಿದೆ' ಎಂದು ಆಕ್ಷೇಪಿಸಿದರು.

ಇದಕ್ಕೆ ಧ್ವನಿಗೂಡಿಸಿದ ಮಳಿಮಠ, `ಸರ್ಕಾರ ಕೂಡಲೇ ಕನ್ನಡ ಬಲ್ಲವರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಬೇಕು. ಕನ್ನಡ ಬಲ್ಲವರು ಇದ್ದಾಗ ಮಾತ್ರ ಸ್ಥಳೀಯರ ಭಾವನೆಗಳನ್ನು ಅರಿತು ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ' ಎಂದರು.

ಮನುಷ್ಯನಲ್ಲಿರುವ ಮೃಗೀಯ ಪ್ರವೃತ್ತಿ ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳು ಹೆಚ್ಚಲು ಕಾರಣ. ಇಂತಹ ಪ್ರವೃತ್ತಿಗಳನ್ನು ದೂರ ಮಾಡಿ, ಮಾನವೀಯ ಮೌಲ್ಯಗಳನ್ನು ಬೆಳೆಸುವ ಕೆಲಸ ಆಗಬೇಕು ಎಂದು ಸಲಹೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.