ADVERTISEMENT

ಅನಲಾಗ್: ಏ. 5 ರ ವರೆಗೆ ಜೀವದಾನ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2013, 19:58 IST
Last Updated 1 ಏಪ್ರಿಲ್ 2013, 19:58 IST

ಬೆಂಗಳೂರು: ಉಪಗ್ರಹ ವಾಹಿನಿಗಳ `ಅನಲಾಗ್' ಮಾದರಿಯ ಟಿ ವಿ ಸಿಗ್ನಲ್ ಪ್ರಸಾರವನ್ನು ಇದೇ 5ರವರೆಗೆ (ಶುಕ್ರವಾರ) ನಿಲ್ಲಿಸದಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಕೇಂದ್ರ ಟೆಲಿಕಾಂ ನಿಯಂತ್ರಣ ಪ್ರಾಧಿಕಾರಕ್ಕೆ (ಟ್ರಾಯ್) ಹೈಕೋರ್ಟ್ ನಿರ್ದೇಶನ ನೀಡಿದೆ.

ಕರ್ನಾಟಕ ಕೇಬಲ್ ಆಪರೇಟರ್‌ಗಳ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಸೋಮವಾರ ಈ ಆದೇಶ ನೀಡಿದರು.

ಅರ್ಜಿಯಲ್ಲಿ ತಮ್ಮ ವಾದವನ್ನೂ ಆಲಿಸಬೇಕು ಎಂದು ಮಧ್ಯಂತರ ಅರ್ಜಿ ಸಲ್ಲಿಸಿರುವ ಡಿಟಿಎಚ್ (ಡೈರೆಕ್ಟ್ ಟು ಹೋಂ) ಸೇವಾದಾತರು, `ಉಪಗ್ರಹ ವಾಹಿನಿಗಳ ಸಿಗ್ನಲ್‌ಗಳನ್ನು ಡಿಜಿಟಲ್ ಮಾದರಿಯಲ್ಲಿ ಮಾತ್ರ ಪ್ರಸಾರ ಮಾಡಬೇಕು ಎಂದು ಕೇಂದ್ರ ಸರ್ಕಾರ ರೂಪಿಸಿರುವ ನೀತಿ ಸರಿಯಾಗಿಯೇ ಇದೆ. ಕೇಬಲ್ ಆಪರೇಟರ್‌ಗಳು ಕೇಂದ್ರ ಸರ್ಕಾರಕ್ಕೆ ತೆರಿಗೆ ವಂಚಿಸುತ್ತಿದ್ದಾರೆ' ಎಂದು ದೂರಿದರು.

ಕೇಬಲ್ ಆಪರೇಟರ್‌ಗಳು ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕೇಂದ್ರ ಸರ್ಕಾರ ಹೆಚ್ಚಿನ ಕಾಲಾವಕಾಶ ಕೋರಿತು. ವಿಚಾರಣೆಯನ್ನು ಮುಂದೂಡಲಾಗಿದೆ.

ಕಟ್ಟಾ ಆಸ್ತಿ ಜಪ್ತಿಗೆ ತಡೆ
ಬೆಂಗಳೂರು:
ಮಾಜಿ ಸಚಿವ, ಬಿಜೆಪಿಯ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ಮೂರು ವಾರಗಳ ತಡೆಯಾಜ್ಞೆ ನೀಡಿದೆ.

ಕಟ್ಟಾ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಈ ಸಂಬಂಧ ಜಾರಿ ನಿರ್ದೇಶನಾಲಯದ ಬೆಂಗಳೂರು ವಲಯದ ಉಪ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಲುವಂತೆ ಆದೇಶಿಸಿ ವಿಚಾರಣೆಯನ್ನು ಮುಂದೂಡಿದರು.

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಹಗರಣದಲ್ಲಿ ಆರೋಪಿಯಾಗಿರುವ ಕಟ್ಟಾ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.