ADVERTISEMENT

ಅಮಾನತ್ ಬ್ಯಾಂಕ್ ಹಗರಣದ ವಿರುದ್ಧ ಕ್ರಮ: ಸಿ.ಎಂ ಭರವಸೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2013, 20:23 IST
Last Updated 4 ಆಗಸ್ಟ್ 2013, 20:23 IST

ಬೆಂಗಳೂರು: ಅಮಾನತ್ ಸಹಕಾರ ಬ್ಯಾಂಕ್‌ನಲ್ಲಿ ನಡೆದಿರುವ ಹಗರಣದ ಬಗ್ಗೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಫ್ ನೇತೃತ್ವದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಭಾನುವಾರ ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.

ಅಮಾನತ್ ಸಹಕಾರ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಈಗಿರುವ ಆಡಳಿತ ಮಂಡಳಿಯನ್ನು ರದ್ದುಗೊಳಿಸಿ, ನೂತನ ಮಂಡಳಿ ರಚಿಸಬೇಕು. ಅಮಾನತ್ ಬ್ಯಾಂಕ್ ಅನ್ನು ಯಾವುದೇ ಬ್ಯಾಂಕ್‌ನೊಂದಿಗೆ ವಿಲೀನಗೊಳಿಸಿದೆ ಅದರ ಅಸ್ತಿತ್ವ ಉಳಿಸಿ ಠೇವಣಿದಾರರ ಹಿತ ಕಾಯಬೇಕು ಎಂಬ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿವಿಧ ಮುಸ್ಲಿಂ ಸಂಘಟನೆಗಳ ಸದಸ್ಯರು ನಗರದ ಬೆನ್ಸನ್‌ಟೌನ್‌ನಲ್ಲಿರುವ ಈದ್ಗಾ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ಭಾನುವಾರ ಸಂಜೆ ಸಹಕಾರ ಸಚಿವ ಮಹದೇವಪ್ರಸಾದ್ ಮತ್ತು ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ಜತೆ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಮಾನತ್ ಸಹಕಾರ ಬ್ಯಾಂಕ್‌ನ ಅಸ್ತಿತ್ವ ಉಳಿಸವುದಾಗಿ ಭರವಸೆ ನೀಡಿದರು. ಜತೆಗೆ ಆರೋಗ್ಯದ ದೃಷ್ಟಿಯಿಂದ ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸಬೇಕು ಎಂದು ಜಾಫರ್ ಷರೀಫ್ ಅವರಲ್ಲಿ ಮನವಿ ಮಾಡಿದ ನಂತರ ಪ್ರತಿಭಟನಾಕಾರರು ಹೋರಾಟವನ್ನು ಹಿಂಪಡೆದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, `ಅಮಾನತ್ ಸಹಕಾರ ಬ್ಯಾಂಕ್‌ನಲ್ಲಿ ನಡೆದಿರುವ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಬದಲು ಕಾನೂನು ರೀತಿಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.