ADVERTISEMENT

ಅಸಮರ್ಪಕ ವಿದ್ಯುತ್ ಪೂರೈಕೆ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2012, 19:00 IST
Last Updated 1 ಅಕ್ಟೋಬರ್ 2012, 19:00 IST

ಹೊಸಕೋಟೆ:  ಅಸಮರ್ಪಕ ವಿದ್ಯುತ್ ಸರಬರಾಜು ವಿರೋಧಿಸಿ ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆಯಲ್ಲಿ ಬಂದ ಕಾರ್ಯಕರ್ತರು ಸರ್ಕಾರ ಹಾಗು ಬೆಸ್ಕಾಂ ವಿರುದ್ದ ಘೋಷಣೆ ಕೂಗಿದರಲ್ಲದೆ ಹೆದ್ದಾರಿಯ ಚನ್ನಬೈರೆಗೌಡ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ನಾಗರಾಜು, `ತಾಲ್ಲೂಕಿನಲ್ಲಿ ಅಸಮರ್ಪಕ ವಿದ್ಯುತ್ ಸರಬರಾಜಿನಿಂದ ರೈತರು ಇರುವ ನೀರನ್ನು ಬೆಳೆಗಳಿಗೆ ಹಾಯಿಸಲಾಗದೆ ಕಂಗೆಟ್ಟಿದ್ದು ಗುಳೆ ಹೋಗುವ ಪರಿಸ್ಥಿತಿ ಉಂಟಾಗಿದೆ. ಹಳ್ಳಿಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ತಲೆದೋರಿದೆ~ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಪುರಸಭೆ ಅಧ್ಯಕ್ಷ ಎಚ್.ಎಂ.ಜಯರಾಮ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿಶಾಮಣ್ಣ, ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಖಲಂದರ್‌ಖಾನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಮಲಾಕ್ಷಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.