ADVERTISEMENT

ಅ.25ರಂದು ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನಾ ರ‍್ಯಾಲಿ

ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2017, 19:30 IST
Last Updated 17 ಅಕ್ಟೋಬರ್ 2017, 19:30 IST

ಬೆಂಗಳೂರು: ‘ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಇದೇ 25ರಂದು ರಾಜ್ಯಾದ್ಯಂತ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡಿದ್ದೇವೆ’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಅಧ್ಯಕ್ಷ ಎನ್. ಮೂರ್ತಿ ತಿಳಿಸಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ರ‍್ಯಾಲಿ ನಡೆಸಲಾಗುತ್ತದೆ. ನಗರದಲ್ಲಿ ಪುರಭವನದಿಂದ ಮುಖ್ಯಮಂತ್ರಿ ನಿವಾಸದವರೆಗೆ ಪ್ರತಿಭಟನಾ ಮೆರವಣಿಗೆ ಏರ್ಪಡಿಸಿದ್ದೇವೆ’ ಎಂದರು.

‘ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣಕ್ಕಾಗಿ ನೇಮಕಗೊಂಡಿದ್ದ ನ್ಯಾಯಮೂರ್ತಿ ಎಂ.ಜೆ. ಸದಾಶಿವ ಆಯೋಗ ಸರ್ಕಾರಕ್ಕೆ ವರದಿ ಸಲ್ಲಸಿ 6 ವರ್ಷಗಳಾಗಿವೆ. ಆದರೆ, ರಾಜ್ಯ ಸರ್ಕಾರ ರಾಜಕೀಯ ಒತ್ತಡಕ್ಕೆ ಮಣಿದು ಆಯೋಗದ ವರದಿಯನ್ನು ಅನುಷ್ಠಾನಗೊಳಿಸಲು ಹಿಂದೇಟು ಹಾಕುತ್ತಿದೆ’ ಎಂದು ಆರೋಪಿಸಿದರು.

ADVERTISEMENT

‘ನವೆಂಬರ್‌ನಲ್ಲಿ ಬೆಳಗಾವಿಯಲ್ಲಿ ನೆಡೆಯುವ ಅಧಿವೇಶನದಲ್ಲಿ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ಮಂಡಿಸಿ ಅಂಗೀಕಾರ ಪಡೆದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಕಾಂತರಾಜು ಆಯೋಗದ ವರದಿಯನ್ನು ಅನುಷ್ಠಾನಗೊಳಿಸಿ ಆಯಾ ಜಾತಿಯ ಜನಸಂಖ್ಯೆ ಆಧರಿಸಿ ಜಾತಿವಾರು ಮೀಸಲಾತಿ ಕಲ್ಪಿಸಬೇಕು’ ಎಂದು ಅವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.