ಬೆಂಗಳೂರು: ಎಸ್‌ಎಲ್‌ಆರ್ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಭವಿಸಿದೆ.
ನಗರದ ನೃಪತುಂಗ ರಸ್ತೆಯಲ್ಲಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನಗರ ಸಶಸ್ತ್ರ ಮೀಸಲು (ಸಿಎಆರ್) ಪೊಲೀಸ್ ಪಡೆಯ ಹೆಡ್ ಕಾನ್‌ಸ್ಟೆಬಲ್ ವೆಂಕಟೇಶ್ ಗಾಯಗೊಂಡಿದ್ದಾರೆ. ಆರ್‌ಬಿಐನ ಭದ್ರತೆಗೆ ವೆಂಕಟೇಶ್ ಅವರನ್ನು ನಿಯೋಜಿಸಲಾಗಿತ್ತು ಎಂದು ಪೊಲೀಸರು ಹೇಳಿದರು.
ವೆಂಕಟೇಶ್ ಅವರು ಬೆಳಿಗ್ಗೆ 10 ಗಂಟೆ ಸುಮಾರಿಗೆ ಬ್ಯಾಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕುರ್ಚಿ ಮೇಲೆ ಕುಳಿತಿದ್ದ ಅವರು ಮೇಲೆ ಏಳುವಾಗ ಆಕಸ್ಮಿಕವಾಗಿ ಹಾರಿದ ಗುಂಡು ಅವರ ಎಡ ಭುಜವನ್ನು ಸೇರಿದೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.